ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಬಿಳೇಕಲ್ಲು ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಮೆರವಣಿಗೆಯ ಸಂಭ್ರಮದ ನಡುವೆಯೇ ಭೀಕರ ದುರಂತವೊಂದು ಸಂಭವಿಸಿದೆ. ಮದ್ಯದ ಅಮಲಿನಲ್ಲಿದ್ದ ಕಾರು ಚಾಲಕನ ಅಜಾಗರೂಕತೆಯಿಂದಾಗಿ 7 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರ ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗ್ರಾಮದಲ್ಲಿ ಮಂಗಳವಾರ ಸಂಜೆ ಸಂಭ್ರಮದಿಂದ ಮೆರವಣಿಗೆ ಸಾಗುತ್ತಿದ್ದ ವೇಳೆ ಸಾನ್ವಿ (7) ಎಂಬ ಮಗು ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದೆ. ಮದ್ಯ ಸೇವಿಸಿದ್ದ ಎನ್ನಲಾದ ಚಾಲಕ ಸುಧಾಕರ್, ಮೆರವಣಿಗೆಯಲ್ಲಿದ್ದವರ ಮೇಲೆ ಕಾರು ಚಾಲನೆ ಮಾಡಿದ್ದೇ ಈ ದುರ್ಘಟನೆಗೆ ಕಾರಣ.

ಅಪಘಾತದಲ್ಲಿ ನಿಶ್ಚಿತ್ (11), ತೃಪ್ತಿ, ತಿಮ್ಮರಾಜು, ಉಷಾ, ಚೇತನ್, ಸೃಷ್ಠಿ ಹಾಗೂ ನಾಗರಾಜ್ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ.
ಸ್ಥಳೀಯರ ಆಕ್ರೋಶ; ಚಾಲಕನಿಗೆ ಧರ್ಮದೇಟು:
ಅಪಘಾತ ಸಂಭವಿಸುತ್ತಿದ್ದಂತೆಯೇ ರೊಚ್ಚಿಗೆದ್ದ ಸ್ಥಳೀಯರು ಕಾರು ಚಾಲಕ ಸುಧಾಕರ್ನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಇದೇ ವೇಳೆ ಕಾರಿನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಪರಾರಿಯಾಗಿದ್ದಾನೆ. ಆಕ್ರೋಶಿತ ಜನರು ಕಾರಿನ ಗಾಜುಗಳನ್ನು ಪುಡಿಪುಡಿ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












