ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ: ರಾಯರ ದರ್ಶನಕ್ಕೆ ತೆರಳುತ್ತಿದ್ದ ಚಿಕ್ಕಮಗಳೂರಿನ 8 ಮಂದಿ ಭಕ್ತರು ಸಾವು

ರಾಯಚೂರು/ಚಿಕ್ಕಮಗಳೂರು: (ನ್ಯೂಸ್‌ ಮಲ್ನಾಡ್‌ ವರದಿ) ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಮಗಳೂರು ಮೂಲದ ಎಂಟು ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಮೂಲದ ಭಕ್ತರು ರಾಯರ ದರ್ಶನಕ್ಕಾಗಿ ಬೊಲೆರೊ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯ ವಿವರ:
ಚಿಕ್ಕಮಗಳೂರು ಜಿಲ್ಲೆಯಿಂದ ಒಟ್ಟು 21 ಮಂದಿ ಭಕ್ತರು ಬೊಲೆರೊ ವಾಹನದಲ್ಲಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಕಲ್ಲುದೇವಕುಂಟ ಬಳಿ ಎದುರುಗಡೆಯಿಂದ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ತುಂಬಿದ್ದ ಟ್ಯಾಂಕರ್, ಬೊಲೆರೊ ವಾಹನಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆರು ಮಂದಿ ಭಕ್ತರು ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಉಳಿದ 13 ಭಕ್ತರನ್ನು ತಕ್ಷಣವೇ ಎಮಿಗನೂರು ಮತ್ತು ಕರ್ನೂಲ್ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದಾಗಿ ಮಂತ್ರಾಲಯಕ್ಕೆ ಹೋಗುವ ಮಾರ್ಗದಲ್ಲಿ ಕೆಲಕಾಲ ಸಂಚಾರ ವ್ಯತ್ಯಯವಾಗಿತ್ತು. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮೃತಪಟ್ಟವರನ್ನು ಚಿಕ್ಕಮಗಳೂರು ಮೂಲದ ಕುಮಾರ್(50), ದೀಪಿಕಾ, ವೀಣಾ(42), ಸುನೀಲ್ (40), ಪುಟ್ಟಮ್ಮ(55), ಲೋಲಾಕ್ಷಿ, ಯಶೋಧಾ(60) ಹಾಗೂ ಬಾಲಕಿ ಬೆಳ್ಳಿ(5) ಎಂದು ಗುರುತಿಸಲಾಗಿದೆ. ಸದ್ಯ ಘಟನೆ ಸಂಬಂಧ ಟ್ಯಾಂಕರ್ ಚಾಲಕನನ್ನು ಮಂತ್ರಾಲಯ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.