ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ದೇಶದ ವಿವಿಧ ಭಾಗಗಳಲ್ಲಿ ನಡೆದ 18 ಸೈಬರ್ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ₹4 ಕೋಟಿಗೂ ಅಧಿಕ ಮೊತ್ತ ವಂಚನೆ ಮಾಡಿದ್ದ ಆರೋಪಿಯನ್ನು ಶಿವಮೊಗ್ಗ ಜಿಲ್ಲಾ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದ ಸಮೀಪ ವಾಸವಾಗಿದ್ದ ಅಂಕಿತ್ (34) ಎಂದು ಗುರುತಿಸಲಾಗಿದೆ.
ಪ್ರಕರಣದ ವಿವರ
ಶಿವಮೊಗ್ಗದ ಸಾಯಿ ಗಾರ್ಮೆಂಟ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಯೊಬ್ಬರ ಬ್ಯಾಂಕ್ ಖಾತೆಯನ್ನು ಆರೋಪಿ ವಂಚನೆಯ ಮೂಲಕ ತನ್ನ ನಿಯಂತ್ರಣಕ್ಕೆ ಪಡೆದುಕೊಂಡಿದ್ದನು. ಬಳಿಕ ಆ ಖಾತೆಯನ್ನು ಸೈಬರ್ ಅಪರಾಧಗಳಿಂದ ಬಂದ ಅಕ್ರಮ ಹಣ ವರ್ಗಾವಣೆಗೆ ‘ಮ್ಯೂಲ್ ಅಕೌಂಟ್’ ಆಗಿ ಬಳಸಿಕೊಂಡು ವಂಚನೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಶಿವಮೊಗ್ಗ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಗಂಭೀರತೆ ಅರಿತು ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದ ಬಳಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯಿಂದ ಮೂರು ಮೊಬೈಲ್ ಫೋನ್ಗಳು, ನಾಲ್ಕು ಎಟಿಎಂ ಕಾರ್ಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ನಾಲ್ಕು ಮ್ಯೂಲ್ ಬ್ಯಾಂಕ್ ಖಾತೆಗಳ ಮಾಹಿತಿಯನ್ನೂ ಪೊಲೀಸರು ಸಂಗ್ರಹಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ಬಳಸಿದ್ದ ಬ್ಯಾಂಕ್ ಖಾತೆಗಳ ಮೂಲಕ ₹32.43 ಲಕ್ಷಕ್ಕೂ ಹೆಚ್ಚು ಹಣ ವರ್ಗಾವಣೆಯಾಗಿರುವುದು ಪತ್ತೆಯಾಗಿದೆ. ದೇಶದ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ 18 ಸೈಬರ್ ವಂಚನೆ ಪ್ರಕರಣಗಳೊಂದಿಗೆ ಆರೋಪಿಗೆ ಸಂಪರ್ಕವಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರೆಸಿದ್ದಾರೆ.














