ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಬೆಂಗಳೂರು ಇವರ ಮಾರ್ಗದರ್ಶನದಲ್ಲಿ ಶಾರದಾ ನರ್ಸಿಂಗ್ ಸಂಸ್ಥೆ, ಶೃಂಗೇರಿ ವತಿಯಿಂದ ತಂಬಾಕು ಮುಕ್ತ ಜಾಗೃತಿ ರ್ಯಾಲಿಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಶೃಂಗೇರಿಯ ವೆಲ್ಕಮ್ ಗೇಟ್ನಿಂದ ಬಸ್ ನಿಲ್ದಾಣದವರೆಗೆ ನಡೆದ ರ್ಯಾಲಿಯಲ್ಲಿ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಸಿಬ್ಬಂದಿ ಭಾಗವಹಿಸಿ, ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಜಾಗೃತಿ ಘೋಷಣೆಗಳು ಹಾಗೂ ಸಂದೇಶ ಫಲಕಗಳ ಮೂಲಕ ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಯಿತು.

ರ್ಯಾಲಿಯ ನಂತರ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ತಂಬಾಕು ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳನ್ನು ಬಿಂಬಿಸುವ ಕಿರುನಾಟಕವನ್ನು ಪ್ರದರ್ಶಿಸಿದರು. ನಾಟಕದ ಮೂಲಕ ಆರೋಗ್ಯದ ಮೇಲಿನ ದುಷ್ಪರಿಣಾಮಗಳು, ಕುಟುಂಬ ಹಾಗೂ ಸಮಾಜದ ಮೇಲೆ ಉಂಟಾಗುವ ಪರಿಣಾಮಗಳ ಕುರಿತು ಪರಿಣಾಮಕಾರಿ ಸಂದೇಶವನ್ನು ಸಾರ್ವಜನಿಕರಿಗೆ ತಲುಪಿಸಲಾಯಿತು.
ಕಾರ್ಯಕ್ರಮದ ಮುಖ್ಯ ಉದ್ದೇಶ ತಂಬಾಕು ಮತ್ತು ಮಾದಕ ವಸ್ತುಗಳ ಸೇವನೆಯ ವಿರುದ್ಧ ಸಮಾಜದಲ್ಲಿ ಜಾಗೃತಿ ಮೂಡಿಸಿ, ಆರೋಗ್ಯಕರ ಜೀವನಶೈಲಿಯನ್ನು ಪ್ರೋತ್ಸಾಹಿಸುವುದಾಗಿತ್ತು. ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ವಿದ್ಯಾರ್ಥಿಗಳ ಜಾಗೃತಿ ಪ್ರಯತ್ನವನ್ನು ಮೆಚ್ಚುಗೆ ವ್ಯಕ್ತಪಡಿಸಲಾಯಿತು.












