ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಣ್ಣು ಬಿಡುವ ಮೊದಲೇ ಗಂಡು ಮಗುವಿನ ಉಸಿರನ್ನೇ ನಿಲ್ಲಿಸಿರುವಂತ ಹೀನ ಕೃತ್ಯವೊಂದು ನಡೆದಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆಯಲ್ಲಿ ಈ ಘಟನೆ ನಡೆದಿದೆ. ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿ, ಮದುವೆಗೆ ಮೊದಲೇ ಗರ್ಭಿಣಿಯಾಗಿದ್ದು, ಕುಟುಂಬದ ಗೌರವದ ದೃಷ್ಟಿಯಿಂದ ಈ ವಿಷಯವನ್ನು ಗುಟ್ಟಾಗಿಡಲಾಗಿತ್ತು. ಆದ್ರೆ, ಕಳೆದ 15 ದಿನಗಳ ಹಿಂದೆ ಮನೆಯಲ್ಲೇ ಯುವತಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಹೋದರೆ ವಿಷಯ ಜಗಜ್ಜಾಹೀರಾಗುತ್ತದೆ ಎಂಬ ಭಯಕ್ಕೆ ನರ್ಸ್ ಆಗಿದ್ದ ಯುವತಿ, ತನ್ನ ತಂದೆ-ತಾಯಿ ಮತ್ತು ಅಜ್ಜಿಯ ಸಹಾಯದಿಂದ ಮನೆಯಲ್ಲೇ ಹೆರಿಗೆ ಮಾಡಿಸಿಕೊಂಡಿದ್ದಾಳೆ. ಆದ್ರೆ, ಹುಟ್ಟಿದ ಒಂದೇ ನಿಮಿಷದಲ್ಲೇ ಮಗು ಸಾವನ್ನಪ್ಪಿದೆ. ಹೀಗಾಗಿ ಮರ್ಯಾದೆ ಹೆದರಿ ಮಗುವನ್ನು ಕುಟುಂಬಸ್ಥರೇ ಉಸಿರುಗಟ್ಟಿಸಿ ಕೊಂದಿರಬಹುದು ಎಂದು ಶಂಕಿಸಲಾಗಿದೆ.
ಇನ್ನು ಮಗು ಸಾವನ್ನಪ್ಪಿದ ಬಳಿಕ ಮೃತದೇವನ್ನು ಬ್ಯಾಗ್ನಲ್ಲಿ ತುಂಬಿಕೊಂಡು ಹೋಗಿ, ಜನವಸತಿ ಇಲ್ಲದ ತಿಪ್ಪೆಯ ಗುಂಡಿಯೊಂದರಲ್ಲಿ ಹೂತು ಬಂದಿದ್ದಾರೆ. ಆದ್ರೆ, ಇದನ್ನು ತಿಪ್ಪೆ ಗುಂಡಿಯ ಪಕ್ಕದ ಮನೆಯ ಯುವಕ ನೋಡಿದ್ದು, ಏನೋ ಹೂತು ಹಾಕಿರುವ ಬಗ್ಗೆ ಯುವಕನಿಗೆ ಅನುಮಾನ ಮೂಡಿದೆ. ಬಳಿಕ ಯುವಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಈ ಮಾಹಿತಿ ಮೇರೆಗೆ ಕೂಡಲೇ ಲಕ್ಕವಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ ತಿಪ್ಪೆಯಲ್ಲಿ ಹೂತಿದ್ದ ಮಗುವಿನ ಮೃತದೇಹ ಪತ್ತೆಯಾಗಿದೆ.
ಸದ್ಯ ಪೊಲೀಸರು ಹಸುಗೂಸಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಕಾಯುತ್ತಿದ್ದಾರೆ.












