
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಬೆಟ್ಟಗೆರೆಯ ವಿದ್ಯಾರ್ಥಿನಿಯೊಬ್ಬರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದು, ಶಾಲೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ.
ಬೆಟ್ಟಗೆರೆ ಗ್ರಾಮದ ಶೇಖರ್ ಮತ್ತು ಗುಲಾಬಿ ದಂಪತಿಯ ಪುತ್ರಿ ನಿತಿನ್ ಈ ಸಾಧನೆ ಮಾಡಿದ ವಿದ್ಯಾರ್ಥಿನಿ. ಇವರು ಬೆಟ್ಟಗೆರೆಯ ಶ್ರೀಮತಿ ನಿಂಗಮ್ಮ ಬೊಮ್ಮಯ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ವಿದ್ಯಾರ್ಥಿನಿಯ ಈ ಕ್ರೀಡಾ ಸಾಧನೆಗೆ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್ಡಿಎಂಸಿ), ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ವಿಜಯಶಾಲಿಯಾಗಿ ಶಾಲೆ, ಗ್ರಾಮ ಹಾಗೂ ಜಿಲ್ಲೆಗೆ ಮತ್ತಷ್ಟು ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)













