ಕೊಪ್ಪ ಮುಖ್ಯ ಬಸ್ ನಿಲ್ದಾಣ ನವೀಕರಣ ಕಾಮಗಾರಿ ಪೂರ್ಣ: ಶಾಸಕ ಟಿ.ಡಿ. ರಾಜೇಗೌಡರಿಂದ ಲೋಕಾರ್ಪಣೆ

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಸುಮಾರು 88 ಲಕ್ಷ 80 ಸಾವಿರ ರೂಪಾಯಿ ವೆಚ್ಚದಲ್ಲಿ ನವೀಕರಣಗೊಂಡ ಕೊಪ್ಪದ ಮುಖ್ಯ ಬಸ್ ನಿಲ್ದಾಣವನ್ನು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಅವರು ಇಂದು ಲೋಕಾರ್ಪಣೆಗೊಳಿಸಿದರು.

ಬಹಳ ವರ್ಷಗಳಿಂದ ಸರಿಯಾದ ನಿರ್ವಹಣೆಯಿಲ್ಲದೆ ಕೊಪ್ಪದ ಮುಖ್ಯ ಬಸ್ ನಿಲ್ದಾಣ ಅವ್ಯವಸ್ಥೆಯಿಂದ ಕೂಡಿತ್ತು. ಅದರಲ್ಲೂ ಮಳೆಗಾಲದಲ್ಲಿ ಪ್ರಯಾಣಿಕರು ಕುಳಿತುಕೊಳ್ಳುವುದಿರಲಿ, ನಿಂತುಕೊಳ್ಳಲೂ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ಮನಗಂಡ ಶಾಸಕ ಟಿ.ಡಿ. ರಾಜೇಗೌಡ ಅವರು ಬಸ್ ನಿಲ್ದಾಣದ ನವೀಕರಣಕ್ಕಾಗಿ ಅನುದಾನ ಒದಗಿಸಿದ್ದು, ಇದೀಗ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಬಳಕೆಗೆ ಮುಕ್ತವಾಗಿದೆ.

ನವೀಕರಣದ ಭಾಗವಾಗಿ ಸುಸಜ್ಜಿತ ಕೊಠಡಿ, ಮೇಲ್ಛಾವಣಿ, ಆಸನ ವ್ಯವಸ್ಥೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಅಲ್ಲದೆ, ಬಸ್ ನಿಲ್ದಾಣಕ್ಕೆ ಹೊಸ ಬಣ್ಣ ಬಳಿದು ಸುಂದರಗೊಳಿಸಲಾಗಿದ್ದು, ಪ್ರಯಾಣಿಕರಿಗೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ.

ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಟಿ.ಡಿ. ರಾಜೇಗೌಡ ಅವರು, “ಬಹಳ ವರ್ಷಗಳಿಂದ ಬಸ್ ನಿಲ್ದಾಣದ ಅವ್ಯವಸ್ಥೆ ನನ್ನ ಗಮನದಲ್ಲಿತ್ತು. ಈ ಹಿನ್ನೆಲೆಯಲ್ಲಿ ಅನುದಾನ ಒದಗಿಸಿ ಇದೀಗ ನವೀಕರಣ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸಿದ್ದೇನೆ. ಈ ಕಾರ್ಯದ ಹಿಂದೆ ಹಲವಾರು ಜನರ ಶ್ರಮವಿದೆ. ಟೀಕೆ ಮಾಡುವವರು ಇದ್ದೇ ಇರುತ್ತಾರೆ. ಆದರೆ ಅಭಿವೃದ್ಧಿ ವಿಚಾರದಲ್ಲಿ ಟೀಕೆಗಳು ಇರಲಿ, ಅವುಗಳನ್ನು ಸ್ವಾಗತಿಸುತ್ತೇನೆ. ಅಭಿವೃದ್ಧಿ ಕಾರ್ಯಗಳಿಗೆ ಎಲ್ಲರೂ ಸಹಕರಿಸಬೇಕು. ಎಲ್ಲರೂ ಒಗ್ಗಟ್ಟಾಗಿ ಶೃಂಗೇರಿ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸೋಣ” ಎಂದು ಹೇಳಿದರು. (ವರದಿ: ಶಶಿ ಬೆತ್ತದಕೊಳಲು)

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.