ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ನಿರಂತರ ಮಳೆ ಹಾಗೂ ಬಿರುಗಾಳಿಯ ಆರ್ಭಟಕ್ಕೆ ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್ ರಸ್ತೆಯ ಐದನೇ ತಿರುವಿನಲ್ಲಿ ಭಾರಿ ಗಾತ್ರದ ಮರ ರಸ್ತೆ ಮೇಲೆ ಉರುಳಿ ಬಿದ್ದ ಪರಿಣಾಮ ಸಾಗುತ್ತಿದ್ದ ಕಾರಿಗೆ ಹಾನಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದೆ.
ಮರ ರಸ್ತೆ ಮಧ್ಯಭಾಗಕ್ಕೆ ಅಡ್ಡಲಾಗಿ ಬಿದ್ದಿದ್ದರಿಂದ ಚಾರ್ಮಾಡಿ ಘಾಟ್ನಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು.

ಘಟನೆಯ ಮಾಹಿತಿ ತಿಳಿದ ಕೂಡಲೇ ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಮರ ತೆರವು ಕಾರ್ಯಾಚರಣೆ ನಡೆಸಿದರು. ಜೆಸಿಬಿ ಹಾಗೂ ಅಗತ್ಯ ಉಪಕರಣಗಳ ನೆರವಿನಿಂದ ಮರವನ್ನು ತೆರವುಗೊಳಿಸಿದ ಬಳಿಕ ವಾಹನ ಸಂಚಾರವನ್ನು ಪುನಃ ಆರಂಭಿಸಲಾಯಿತು.
ಮಳೆಗಾಲದ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಭೂಕುಸಿತ, ಮರಗಳು ಉರುಳುವಂತಹ ಘಟನೆಗಳು ಸಂಭವಿಸುವ ಸಾಧ್ಯತೆ ಹೆಚ್ಚಿರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)












