ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮುಸ್ಲಿಂ ಸಮುದಾಯದ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದಡಿ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಮುದಾಸೀರ್ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ‘ಯೂತ್ ಫಾರ್ ನೇಷನ್’ ಕಾರ್ಯಕ್ರಮದಲ್ಲಿ ಸಿ.ಟಿ. ರವಿ ಮಾಡಿದ ಭಾಷಣದಲ್ಲಿ ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡುವ ರೀತಿಯ ಪದಗಳನ್ನು ಬಳಸಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಭಾಷಣದ ವೇಳೆ ಅವರು ಮುಲ್ಲಾಗಳು, NEET ಪರೀಕ್ಷೆ, CAA, NRC ಹಾಗೂ ‘ತುಕ್ಡೆ ಗ್ಯಾಂಗ್’ ಕುರಿತು ನೀಡಿದ ಹೇಳಿಕೆಗಳು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ದ್ವೇಷ ಹರಡುವ ಉದ್ದೇಶ ಹೊಂದಿದ್ದು, ಸಮಾಜದಲ್ಲಿ ಅಶಾಂತಿ ಮತ್ತು ಧಾರ್ಮಿಕ ವೈಮನಸ್ಸು ಸೃಷ್ಟಿಸುವ ಸಾಧ್ಯತೆ ಇದೆ ಎಂದು ದೂರುದಾರರು ತಿಳಿಸಿದ್ದಾರೆ.

ಇದೇ ವೇಳೆ, ಈ ರೀತಿಯ ಭಾಷಣಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಿದ್ದು, ಸಿ.ಟಿ. ರವಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.
ದೂರಿನ ಆಧಾರದ ಮೇಲೆ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ನಡೆಸುತ್ತಿದ್ದಾರೆ.














