
ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಮಲೆನಾಡಿನ ಭಾಗದಲ್ಲಿ ಕಾಡಾನೆಗಳ ಅಟ್ಟಹಾಸ ಮಿತಿಮೀರಿದ್ದು, ಆನೆ ದಾಳಿಗೆ ಇಬ್ಬರು ಬಲಿಯಾದ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆಯ 12 ಗ್ರಾಮಗಳಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿಷೇಧಾಜ್ಞೆ ಜಾರಿಗೊಳಿಸಿದೆ.
ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ರಕ್ಷಣೆ ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಚಿಕ್ಕಮಗಳೂರು ತಾಲೂಕಿನಾದ್ಯಂತ ಒಟ್ಟು 12 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಾಲೂಕು ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಕಾಫಿನಾಡಿನಲ್ಲಿ ಕಾಡಾನೆಗಳ ಆತಂಕ ಮುಂದುವರಿದಿದ್ದು, ಇದೀಗ ನಗರದ ಸಮೀಪದಲ್ಲೇ ಆನೆಗಳು ಪ್ರತ್ಯಕ್ಷವಾಗಿರುವುದು ಜನರಲ್ಲಿ ಭೀತಿ ಹುಟ್ಟಿಸಿದೆ. ಚಿಕ್ಕಮಗಳೂರು ನಗರದ ಕೂಗಳೆತೆಯಲ್ಲಿರುವ ಮೂಗ್ತಿಹಳ್ಳಿ ಮತ್ತು ಶಿರಗುಂದ ವ್ಯಾಪ್ತಿಯಲ್ಲಿ ಕಾಡಾನೆಗಳು ಸಂಚರಿಸುತ್ತಿದ್ದು, ಸುಮಾರು ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಈ ಆನೆಗಳು ಬೀಡುಬಿಟ್ಟಿವೆ. ಈ ಹಿನ್ನೆಲೆಯಲ್ಲಿ ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ. ಆನೆಗಳನ್ನು ಹಿಮ್ಮೆಟ್ಟಿಸುವ ಕಾರ್ಯಾಚರಣೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಚಿಕ್ಕಮಗಳೂರು ತಹಶಿಲ್ದಾರ್ ರೇಷ್ಮಾ ಅವರು ಸುತ್ತಮುತ್ತಲ 12 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆ ಪ್ರದೇಶಗಳು ಮತ್ತು ಅವಧಿ
ಚಿಕ್ಕಮಗಳೂರು ವಲಯ ವ್ಯಾಪ್ತಿಯ ಮುಗ್ತಿಹಳ್ಳಿ, ವಸ್ತಾರೆ, ಮಳಲೂರು, ದಂಟರಮಕ್ಕಿ, ನಲ್ಲೂರು, ಕಾಲೇನಹಳ್ಳಿ, ಉಕ್ಕುಂದ, ಗಂಟೆಹಳ್ಳಿ, ಜೋಳದಾಳ್, ದಂಬದಹಳ್ಳಿ, ಬಿಕ್ಕೋಡು ಮತ್ತು ಹಿರೇಗುಂದ ಗ್ರಾಮಗಳಲ್ಲಿ ಈ ಆದೇಶ ಅನ್ವಯವಾಗಲಿದೆ. ಫೆಬ್ರವರಿ 24ರ ಸಂಜೆ 4 ಗಂಟೆಯಿಂದ ಫೆಬ್ರವರಿ 26ರ ಬೆಳಗ್ಗೆ 8 ಗಂಟೆಯವರೆಗೆ ಜಾರಿಗೆಯಲ್ಲಿರುತ್ತದೆ.













