
ಚಿಕ್ಕಮಗಳೂರು: ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ಗೈರುಹಾಜರಿ ಹಾಗೂ ಆಡಳಿತ ವ್ಯವಸ್ಥೆಯ ಸಮನ್ವಯದ ಕೊರತೆಯಿಂದಾಗಿ ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಹತ್ತಾರು ರೋಗಿಗಳು ಗಂಟೆಗಟ್ಟಲೆ ಕಾಯಬೇಕಾದ ಘಟನೆ ನಡೆದಿದೆ.
ಜಿಲ್ಲಾಸ್ಪತ್ರೆಯ ಶ್ವಾಸಕೋಶ ತಜ್ಞರಾದ ಡಾ. ದೀಪಕ್ ಯು.ಜಿ. ಅವರು ಕರ್ತವ್ಯದ ಸಮಯದಲ್ಲಿ ಆಸ್ಪತ್ರೆಯಲ್ಲಿ ಲಭ್ಯವಿರದ ಹಿನ್ನೆಲೆಯಲ್ಲಿ ರೋಗಿಗಳು ತೀವ್ರ ತೊಂದರೆ ಅನುಭವಿಸುವಂತಾಯಿತು ಎಂದು ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ವಿನೋದ್ ಬೊಗಸೆ ಆರೋಪಿಸಿದ್ದಾರೆ.
ವಿಷಯ ತಿಳಿದು ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಂದ ಮಾಹಿತಿ ಪಡೆದಾಗ, ಬೆಳಿಗ್ಗೆಯಿಂದ ಮಧ್ಯಾಹ್ನ 2:30ರವರೆಗೆ ವೈದ್ಯರು ಬರುತ್ತಾರೆ ಎಂದು ಸಿಬ್ಬಂದಿ ರೋಗಿಗಳನ್ನು ಕಾಯಿಸುತ್ತಿದ್ದರು ಎಂಬುದು ತಿಳಿದುಬಂದಿದೆ. ಈ ಕುರಿತು ಡೀನ್ ಅವರನ್ನು ಪ್ರಶ್ನಿಸಿದಾಗ ವೈದ್ಯರು ಹಾಸ್ಟೆಲ್‌ಗೆ ಭೇಟಿ ನೀಡಿದ್ದಾರೆ ಎಂದು ಮಾಹಿತಿ ನೀಡಲಾಗಿದೆ. ಆದರೆ ವೈದ್ಯರಿಗೆ ದೂರವಾಣಿ ಕರೆ ಮಾಡಿದ ಕೆಲವೇ ಕ್ಷಣಗಳಲ್ಲಿ ಅವರು ಆಸ್ಪತ್ರೆಗೆ ಆಗಮಿಸಿ, ತಾನು ರಜೆಯಲ್ಲಿದ್ದೇನೆ ಎಂದು ತಿಳಿಸಿದ್ದಾರೆ ಎಂದು ವಿನೋದ್ ಬೊಗಸೆ ಹೇಳಿದ್ದಾರೆ.

ವೈದ್ಯರಿಗೆ ರಜೆ ಇದ್ದಲ್ಲಿ ಅದನ್ನು ಮೊದಲೇ ರೋಗಿಗಳಿಗೆ ತಿಳಿಸುವ ವ್ಯವಸ್ಥೆ ಇರಬೇಕಲ್ಲವೇ? ಪರ್ಯಾಯವಾಗಿ ಬದಲಿ ವೈದ್ಯರನ್ನು ನಿಯೋಜಿಸಿ ರೋಗಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ವಿಚಾರಿಸಿದಾಗ ಮಾಹಿತಿ ನೀಡಲು ಡಿ ಗ್ರೂಪ್ ನೌಕರರೇ ಇಲ್ಲ ಎಂಬ ಉತ್ತರ ಸಿಕ್ಕಿರುವುದು ಮತ್ತಷ್ಟು ಅಸಮಾಧಾನಕ್ಕೆ ಕಾರಣವಾಗಿದೆ.
ಒಂದೆಡೆ ಡೀನ್ ಅವರು ವೈದ್ಯರು ಹಾಸ್ಟೆಲ್‌ಗೆ ತೆರಳಿದ್ದಾರೆ ಎಂದು ಮಾಹಿತಿ ನೀಡಿದರೆ, ಮತ್ತೊಂದೆಡೆ ವೈದ್ಯರು ತಾವು ರಜೆಯಲ್ಲಿರುವುದಾಗಿ ಹೇಳಿರುವುದು ಆಸ್ಪತ್ರೆಯ ಆಡಳಿತ ವ್ಯವಸ್ಥೆಯಲ್ಲಿನ ಸಮನ್ವಯದ ಕೊರತೆಯನ್ನು ಎತ್ತಿತೋರಿಸುತ್ತದೆ. ರೋಗಿಗಳಿಗೆ ಸರಿಯಾದ ಮಾಹಿತಿ ನೀಡುವ ಜವಾಬ್ದಾರಿ ಯಾರದ್ದು ಎಂಬ ಪ್ರಶ್ನೆಯನ್ನೂ ಅವರು ಮುಂದಿಟ್ಟಿದ್ದಾರೆ.
ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸುವವರು ಬಹುತೇಕ ಬಡ ಮತ್ತು ಮಧ್ಯಮ ವರ್ಗದ ಜನರಾಗಿದ್ದು, ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿರುವ ಅವರು ಚಿಕಿತ್ಸೆಗಾಗಿ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿರುವುದು ವಿಷಾದನೀಯ. ವೈದ್ಯರಿಗೆ ರಜೆ ಪಡೆಯುವ ಹಕ್ಕಿದೆ. ಆದರೆ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಪರ್ಯಾಯ ವೈದ್ಯಕೀಯ ವ್ಯವಸ್ಥೆ ಕಲ್ಪಿಸುವುದು ಆಸ್ಪತ್ರೆಯ ಆಡಳಿತದ ಜವಾಬ್ದಾರಿಯಾಗಿದೆ ಎಂದು ವಿನೋದ್ ಬೊಗಸೆ ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲಾಸ್ಪತ್ರೆ ಎಂದರೆ ಬಡ ರೋಗಿಗಳಿಗೆ ಆಸರೆಯಾಗಬೇಕೇ ಹೊರತು, ವೈದ್ಯರಿಗಾಗಿ ಗಂಟೆಗಟ್ಟಲೆ ಕಾಯುವ ತಾಣವಾಗಬಾರದು. ಆಸ್ಪತ್ರೆಯ ಆಡಳಿತ ಮಂಡಳಿ ಈ ಬಗ್ಗೆ ತಕ್ಷಣ ಗಮನಹರಿಸಿ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.












