ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಟಾಪಟಿ ನಡೆದಿದ್ದು, ಕಾರ್ಯಕರ್ತರು ಗುರುವಾರ ಕೈ ಮಿಲಾಯಿಸಿ ಪರಸ್ಪರ ಧಿಕ್ಕಾರ ಕೂಗಿದರು.
ನಗರದ ಹೊರ ವಲಯದ ರಾಂಪುರ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ ವಿಚಾರದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ನಡುವೆ ಜಟಾಪಟಿ ಆರಂಭವಾಗಿದೆ. ಗುರುವಾರ ರಸ್ತೆ ಕಾಮಗಾರಿ ವೀಕ್ಷಣೆ ಮಾಡಲು ತೆರಳಿದ್ದ ಸಿ.ಟಿ.ರವಿ ಅವರನ್ನು ಅಡ್ಡಗಟ್ಟಿದ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.

20 ವರ್ಷಗಳಿಂದ ಶಾಸಕರಾಗಿದ್ದ ಅವಧಿಯಲ್ಲಿ ರಸ್ತೆ ಅಭಿವೃದ್ಧಿ ಮಾಡಲಿಲ್ಲ. ಈಗ ಕಾಂಗ್ರೆಸ್ ಶಾಸಕ ಎಚ್.ಡಿ.ತಮ್ಮಯ್ಯ ಆಸಕ್ತಿಯಿಂದ ಕಾಮಗಾರಿ ಕಾರ್ಯಾದೇಶವಾಗಿದೆ. ಈಗಲೂ ಕಾಮಗಾರಿ ಆರಂಭಿಸಲು ವಿಳಂಬ ಮಾಡಲಾಗುತ್ತಿದ್ದು, ಇದಕ್ಕೆ ಸಿ.ಟಿ.ರವಿ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಮಗಾರಿಗೆ ಮಂಜೂರಾತಿ ಕೊಡಿಸಿರುವುದು ನಾನು. ಆರಂಭವಾಗಲು ವಿಳಂಬ ಆಗುವುದಕ್ಕೆ ಕಾಂಗ್ರೆಸ್ ಕಾರಣ. 2022ರಲ್ಲಿ ಮಂಜೂರಾಗಿದ್ದ ಕಾಮಗಾರಿಗೆ ಈಗ ಕಾರ್ಯಾದೇಶ ನೀಡಲಾಗಿದೆ’ ಎಂದು ಸಿ.ಟಿ.ರವಿ ಹೇಳಿದರು.












