ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಅಪರಾಧಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
2024ರಲ್ಲಿ ಶಿಕಾರಿಪುರ ತಾಲ್ಲೂಕಿನ 23 ವರ್ಷದ ವ್ಯಕ್ತಿಯೊಬ್ಬರು, 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕುರಿತು ಶಿರಾಳಕೊಪ್ಪ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆಗಿನ ತನಿಖಾಧಿಕಾರಿ, ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ಪುಷ್ಪಾ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಶ್ರೀಧರ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

















