
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣ ಪಂಚಾಯ್ತಿಯಲ್ಲಿ ನೇರ ಪಾವತಿ ಆಧಾರದ ಮೇಲೆ ಕಳೆದ ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ 9 ಪೌರ ಕಾರ್ಮಿಕರನ್ನು ಖಾಯಂಗೊಳಿಸುವಂತೆ ಆಗ್ರಹಿಸಿ, ಪೌರ ಕಾರ್ಮಿಕರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ.
ಪ್ರಮುಖ ಧಾರ್ಮಿಕ ಕ್ಷೇತ್ರವಾಗಿರುವ ಶೃಂಗೇರಿಗೆ ಕಳೆದ ವರ್ಷ 80.90 ಲಕ್ಷಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡಿದ್ದು, ಪ್ರತಿದಿನ ಸರಾಸರಿ 9.70 ಟನ್ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಇದರ ಜೊತೆಗೆ ಗಣ್ಯರ ಭೇಟಿ ಹಾಗೂ ದಸರಾ ಉತ್ಸವದ ಸಂದರ್ಭಗಳಲ್ಲಿ ಸ್ವಚ್ಛತಾ ಕಾರ್ಯಗಳಿಗೆ ಹೆಚ್ಚಿನ ಕಾರ್ಮಿಕರ ಅಗತ್ಯವಿದೆ.

ಈ ಹಿಂದೆ 18 ದಿನಗಳ ಕಾಲ ಅಹೋರಾತ್ರಿ ಮುಷ್ಕರ ನಡೆಸಿದ ಸಂದರ್ಭದಲ್ಲಿ 12 ಕಾರ್ಮಿಕರನ್ನು ಖಾಯಂಗೊಳಿಸುವ ಭರವಸೆ ನೀಡಲಾಗಿತ್ತು. ಬಳಿಕ ಮೂರು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಉಳಿದ 9 ಕಾರ್ಮಿಕರ ಖಾಯಂ ನೇಮಕಾತಿ ಬೇಡಿಕೆ ಮಾತ್ರ ಈಡೇರಿಲ್ಲ.

ಈ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರೂ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಕಾರ್ಮಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನವೆಂಬರ್ 11ರೊಳಗೆ ಬೇಡಿಕೆ ಈಡೇರಿಸುವ ಕುರಿತು ಸಕಾರಾತ್ಮಕ ನಿರ್ಧಾರ ಕೈಗೊಳ್ಳದಿದ್ದರೆ, ನವೆಂಬರ್ 16ರಿಂದ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.













