ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸುವುದನ್ನು ವಿರೋಧಿಸಿ ಸೆ.21ರಂದು ಶೃಂಗೇರಿಯಲ್ಲಿ ಧರಣಿ ಸತ್ಯಾಗ್ರಹ

ಶೃಂಗೇರಿ:  (ನ್ಯೂಸ್ ಮಲ್ನಾಡ್ ವರದಿ) ಪಶ್ಚಿಮ ಘಟ್ಟ ಪ್ರದೇಶಗಳನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ–ಹಸಿರು ಸೇನೆ, ಶೃಂಗೇರಿ ತಾಲೂಕು ಘಟಕದ ವತಿಯಿಂದ ಸರ್ವಪಕ್ಷಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಸೆಪ್ಟೆಂಬರ್ 21ರಂದು ಧರಣಿ ಮತ್ತು ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಸೆ.21ರಂದು ಸೋಮವಾರ ಶೃಂಗೇರಿ ತಾಲೂಕು ಕಚೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ನೂರಾರು ವರ್ಷಗಳಿಂದ ಸ್ಥಳೀಯರು ಪರಿಸರಕ್ಕೆ ಪೂರಕವಾಗಿ ಬದುಕು ನಡೆಸಿಕೊಂಡು ಬಂದಿದ್ದಾರೆ. ಆದರೆ ಸ್ಥಳೀಯ ನಿವಾಸಿಗಳ ಬದುಕು, ಸಮಸ್ಯೆಗಳು ಹಾಗೂ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸದೆ ಅವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿ ವರದಿ ರೂಪಿಸಲಾಗಿದೆ ಎಂದು ರೈತ ಸಂಘ ಆಕ್ಷೇಪ ವ್ಯಕ್ತಪಡಿಸಿದೆ.

ಕಸ್ತೂರಿ ರಂಗನ್ ವರದಿ ಜಾರಿಗೆ ಬಂದಲ್ಲಿ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ವಾಸಿಸುವ ಜನರ ಬದುಕು ಮತ್ತಷ್ಟು ದುಸ್ತರವಾಗಲಿದೆ. ರೈತರು ಬೆಳೆ ಬೆಳೆಯಲು ಹಾಗೂ ಸ್ಥಳೀಯರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಡ್ಡಿಯಾಗುವಂತಹ ಹಲವು ಶರತ್ತುಗಳನ್ನು ವರದಿಯಲ್ಲಿ ವಿಧಿಸಲಾಗಿದೆ. ಇದರಿಂದ ಸಾರ್ವಜನಿಕರಿಗೆ ಎದುರಾಗಬಹುದಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರಗಳನ್ನು ವರದಿಯಲ್ಲಿ ಸೂಚಿಸಿಲ್ಲ ಎಂದು ಸಂಘಟಕರು ಆರೋಪಿಸಿದ್ದಾರೆ.

ಸ್ಥಳೀಯ ಜನರ ಜೀವನೋಪಾಯ ಮತ್ತು ಅಭಿವೃದ್ಧಿಗೆ ತೊಂದರೆ ಉಂಟುಮಾಡುವ ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವುದನ್ನು ತೀವ್ರವಾಗಿ ವಿರೋಧಿಸುವುದಾಗಿ ರೈತ ಸಂಘ–ಹಸಿರು ಸೇನೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ನಡೆಯಲಿರುವ ಧರಣಿ ಸತ್ಯಾಗ್ರಹದಲ್ಲಿ ರೈತರು, ಸಾರ್ವಜನಿಕರು, ಸರ್ವಪಕ್ಷಗಳ ಮುಖಂಡರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಬೆಂಬಲಿಸಬೇಕು ಎಂದು ಸಂಘಟಕರು ಮನವಿ ಮಾಡಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.