ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್, ಬಾಳೂರು ಹಾಗೂ ಮಧುಗುಂಡಿ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಭೇಟಿ ನೀಡಿ ಮುನ್ನೆಚ್ಚರಿಕೆ ಹಾಗೂ ವಿಪತ್ತು ನಿರ್ವಹಣಾ ಸಿದ್ಧತೆಗಳ ಕುರಿತು ಸ್ಥಳ ಪರಿಶೀಲನೆ ನಡೆಸಿದರು.
ಈ ವೇಳೆ ಅರಣ್ಯ, ಕಂದಾಯ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಮುಂಗಾರು ಅವಧಿಯಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಹಾಗೂ ತುರ್ತು ಕ್ರಮಗಳ ಬಗ್ಗೆ ಚರ್ಚಿಸಿದರು. ಚಾರ್ಮಾಡಿ ಘಾಟ್‌ನ ಹೆದ್ದಾರಿ, ತಡೆಗೋಡೆ ಹಾಗೂ ಭೂಕುಸಿತ ಸಂಭವನೀಯ ಪ್ರದೇಶಗಳನ್ನು ವೀಕ್ಷಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ನೆರೆಪ್ರವಾಹಕ್ಕೆ ಒಳಪಡುವ ಬಾಳೂರು ಮತ್ತು ಮಧುಗುಂಡಿ ಗ್ರಾಮಗಳಲ್ಲೂ ಸ್ಥಳ ಪರಿಶೀಲನೆ ನಡೆಸಿದ ಅವರು, ಪರಿಸ್ಥಿತಿಯ ಕುರಿತು ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದು, ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಿದರು.

ಪರಿಶೀಲನಾ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ನಟೇಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಕರ್ಷ, ವಲಯ ಅರಣ್ಯಾಧಿಕಾರಿ ಮಂಜುನಾಥ್, ಉಪವಲಯ ಅರಣ್ಯಾಧಿಕಾರಿ ರಂಜಿತ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಚನ್ನಕೇಶವ, ಅಭಿಯಂತರರಾದ ಚನ್ನಯ್ಯ ಮತ್ತು ಮಂಜುನಾಥ್, ಹೆದ್ದಾರಿ ಪ್ರಾಧಿಕಾರದ ಅಭಿಯಂತರರಾದ ಶಶಿಕುಮಾರ್ ಹಾಗೂ ವಿಘ್ನೇಶ್, ವೃತ್ತ ನಿರೀಕ್ಷಕ ರಾಜಶೇಖರ್, ಕಂದಾಯ ಅಧಿಕಾರಿ ಮಂಜುನಾಥ್, ಬಾಬು, ಗ್ರಾಮ ಲೆಕ್ಕಾಧಿಕಾರಿ ಮಹೇಶ್ ಹಾಗೂ ಸಾಮಾಜಿಕ ಕಾರ್ಯಕರ್ತ ಸಂಜಯಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು. (ವರದಿ- ತನು ಕೊಟ್ಟಿಗೆಹಾರ)













