ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಜ್ಞಾನಭಾರತಿ ವಿದ್ಯಾಕೇಂದ್ರದಲ್ಲಿ ಜುಲೈ 4ರಂದು ಜಿಲ್ಲಾ ಶೈಕ್ಷಣಿಕ ಸಹಮಿಲನ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿದ್ಯಾಭಾರತಿಯ ಆರು ಶಾಲೆಗಳ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯ ಸದಸ್ಯರು ಸೇರಿದಂತೆ ಸುಮಾರು 170 ಮಂದಿ ಭಾಗವಹಿಸಿದರು.
ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು ಹಾಗೂ ಭಾಗವಹಿಸಿದವರನ್ನು ಕುಂಕುಮ, ಅರಿಶಿನ ಮತ್ತು ಹೂ ನೀಡಿ ಸ್ವಾಗತಿಸಲಾಯಿತು. ಬಳಿಕ ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಸರಸ್ವತಿ ವಂದನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಜ್ಞಾನಭಾರತಿ ವಿದ್ಯಾಕೇಂದ್ರದ ಅಧ್ಯಕ್ಷ ಶ್ರೀಕಾಂತ್, ವಿದ್ಯಾಭಾರತಿ ಕರ್ನಾಟಕ ಚಿಕ್ಕಮಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕಾರ್ಯದರ್ಶಿ ಆನಂದ್, ಕರ್ನಾಟಕ ದಕ್ಷಿಣ ಪ್ರಾಂತ ಕಾಲೇಜು ವಿದ್ಯಾರ್ಥಿ ಪ್ರಮುಖ್ ಉಮೇಶ್ ಹಾಗೂ ಅತಿಥಿ ಶ್ರೀಪತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಉದ್ಘಾಟಿಸಿದ ಗುರುಮೂರ್ತಿ ಅವರು ಪ್ರಶಿಕ್ಷಣದ ಧ್ಯೇಯೋದ್ದೇಶಗಳು ಹಾಗೂ ಅದರ ಅಗತ್ಯತೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಮೇಶ್ ಅವರು ‘ವಂದೇ ಮಾತರಂ’ ಗೀತೆಯ ಹಿನ್ನೆಲೆ ಮತ್ತು ಮಹತ್ವವನ್ನು ವಿವರಿಸಿದರು. ಸಮಾರೋಪ ಸಮಾರಂಭದಲ್ಲಿ ಶ್ರೀಪತಿ ಅವರು ಶಿಕ್ಷಕರು ತರಗತಿಯಲ್ಲಿ ಅನುಸರಿಸಬೇಕಾದ ಬೋಧನಾ ಚಟುವಟಿಕೆಗಳು, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ದೃಷ್ಟಿಕೋನ ಬೆಳೆಸುವ ಅಗತ್ಯತೆ ಕುರಿತು ಹಾಸ್ಯಮಿಶ್ರಿತ ಶೈಲಿಯಲ್ಲಿ ಮನಮುಟ್ಟುವ ಉಪನ್ಯಾಸ ನೀಡಿದರು.
ಜಿಲ್ಲೆಯ ವಿವಿಧ ಶಾಲೆಗಳ ಶಿಕ್ಷಕರ ನಡುವೆ ಪರಸ್ಪರ ಬಾಂಧವ್ಯ ಬೆಳೆಸುವ ಉದ್ದೇಶದಿಂದ ಆಯೋಜಿಸಿದ್ದ ಈ ಸಹಮಿಲನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕೊನೆಯಲ್ಲಿ ವಂದೇ ಮಾತರಂ ಗೀತೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.













