
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಹೈಕೋರ್ಟ್ ಆದೇಶದಂತೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯು ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಸಾಕ್ಷಿಯಾಯಿತು. ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರು ಮರು ಎಣಿಕೆಯಲ್ಲೂ ಗೆಲುವು ಸಾಧಿಸುವ ಮೂಲಕ ತಮ್ಮ ಸ್ಥಾನವನ್ನು ಮರುಸ್ಥಾಪಿಸಿಕೊಂಡಿದ್ದಾರೆ ಎಂದು ಕೂಡ ಹೇಳಲಾಗಿತ್ತು. ಆದ್ರೆ ಅಂತಿಮವಾಗಿ 55 ಮತಗಳಿಂದ ಡಿ ಎನ್ ಜೀವರಾಜ್ ಗೆಲುವು ಸಾಧಿಸಿದ್ದಾರೆ.
ಏನಿದು ಪ್ರಕರಣ?
2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಒಟ್ಟು 1,811 ಅಂಚೆ ಮತಗಳು ಚಲಾವಣೆಯಾಗಿದ್ದವು. ಅದರಲ್ಲಿ 279 ಮತಗಳನ್ನು ತಿರಸ್ಕರಿಸಲಾಗಿತ್ತು. ಅಂತಿಮ ಫಲಿತಾಂಶದಲ್ಲಿ ಟಿ.ಡಿ. ರಾಜೇಗೌಡ ಅವರು 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಈ ಫಲಿತಾಂಶವನ್ನು ಪ್ರಶ್ನಿಸಿದ ಬಿಜೆಪಿ ಅಭ್ಯರ್ಥಿ ಜೀವರಾಜ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಪ್ರಿಲ್ 6ರಂದು ಮಹತ್ವದ ಆದೇಶ ನೀಡಿ, ತಿರಸ್ಕೃತಗೊಂಡ 279 ಅಂಚೆ ಮತಗಳನ್ನು ಮರು ಪರಿಶೀಲನೆ ಮಾಡಿ, ಬಳಿಕ ಎಲ್ಲಾ ಅಂಚೆ ಮತಗಳನ್ನು ಮರು ಎಣಿಕೆ ಮಾಡಿ ಹೊಸ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು.
ಇದರ ಬೆನ್ನಲ್ಲೇ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಆಕ್ಷೇಪಣೆ ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ನೀಡಲಾಗಿತ್ತು. ಏಪ್ರಿಲ್ 20ರಂದು ಆ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಮರು ಮತ ಎಣಿಕೆ ಪ್ರಕ್ರಿಯೆಗೆ ಮುಂದಾಗಿದ್ದರು.














