
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಚಾರ್ಮಾಡಿ ಘಾಟ್ನ ಅಲೆಖಾನ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ 24 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಚಿರಾಗ್ ಮೃತಪಟ್ಟಿದ್ದಾನೆ. ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಮತ್ತೊಬ್ಬ ಯುವಕ ಯಶಸ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಬೆಂಗಳೂರಿನಿಂದ ಚಾರ್ಮಾಡಿ ಘಾಟ್ನ ಪ್ರಕೃತಿ ಸೌಂದರ್ಯ ಹಾಗೂ ವ್ಯೂ ಪಾಯಿಂಟ್ಗಳನ್ನು ವೀಕ್ಷಿಸಲು ಬಂದಿದ್ದ ಇಬ್ಬರು ಕಾಲೇಜು ಸ್ನೇಹಿತರು ಬೈಕ್ನಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಮುಂದೆ ಸಾಗುತ್ತಿದ್ದ ವಾಹನವನ್ನು ಓವರ್ಟೇಕ್ ಮಾಡಲು ಪ್ರಯತ್ನಿಸಿದಾಗ ಬೈಕ್ ನಿಯಂತ್ರಣ ತಪ್ಪಿ ಘಾಟ್ನ ತಡೆಗೋಡೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿಯಲ್ಲಿ ಕುಳಿತಿದ್ದ ಚಿರಾಗ್ ರಸ್ತೆಗೆ ಎಸೆಯಲ್ಪಟ್ಟು ಬಿದ್ದಿದ್ದಾನೆ. ಇದೇ ಸಂದರ್ಭದಲ್ಲಿ ಕಡೂರಿನಿಂದ ಧರ್ಮಸ್ಥಳದತ್ತ ತೆರಳುತ್ತಿದ್ದ ಬಸ್ನ ಹಿಂಬದಿ ಚಕ್ರ ಯುವಕನ ತಲೆಯ ಮೇಲೆ ಹರಿದಿದೆ. ಪರಿಣಾಮ ಹೆಲ್ಮೆಟ್ ಧರಿಸಿದ್ದರೂ ತಲೆಗೆ ಗಂಭೀರ ಗಾಯಗಳಾಗಿವೆ.

ತಕ್ಷಣ ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಗಿದ್ದು, ಆದರೆ ಮಾರ್ಗಮಧ್ಯೆಯೇ ಚಿರಾಗ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮತ್ತೊಬ್ಬ ಯುವಕ ಯಶಸ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ವರದಿ- ತನು ಕೊಟ್ಟಿಗೆಹಾರ)













