
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಡಿ.ಎನ್. ಜೀವರಾಜ್ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ.
ಹೈಕೋರ್ಟ್ ಆದೇಶದ ಮೇರೆಗೆ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಶಾಸಕ ಟಿ.ಡಿ. ರಾಜೇಗೌಡ ಅವರ ಚುನಾವಣಾ ಏಜೆಂಟ್ ಸುಧೀರ್ ಕುಮಾರ್ ಮುರೊಳ್ಳಿ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಎನ್. ಜೀವರಾಜ್ ಅವರು ಹೈಕೋರ್ಟ್ನಿಂದ ತಡೆಯಾಜ್ಞೆ ಪಡೆದಿದ್ದರು. ಪ್ರಕರಣದ ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಲಯ ಇದೀಗ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ.
ಇನ್ನೊಂದೆಡೆ, 2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದ ಫಲಿತಾಂಶಕ್ಕೆ ಸಂಬಂಧಿಸಿದ ಮರು ಮತ ಎಣಿಕೆ ವಿವಾದ ಸುಪ್ರೀಂಕೋರ್ಟ್ನಲ್ಲಿ ಇನ್ನೂ ವಿಚಾರಣೆಯಲ್ಲಿದೆ. ತಿರಸ್ಕೃತ ಅಂಚೆ ಮತಗಳ ಮರು ಎಣಿಕೆ ಸಂದರ್ಭದಲ್ಲಿ ಟಿ.ಡಿ. ರಾಜೇಗೌಡ ಅವರಿಗೆ ಒಂದು ಮತ ಹೆಚ್ಚುವರಿಯಾಗಿ ಲಭಿಸಿದ್ದರಿಂದ ಅವರ ಮುನ್ನಡೆ 202ಕ್ಕೆ ಏರಿಕೆಯಾಗಿತ್ತು. ಆದರೆ, ಬಳಿಕ ಚುನಾವಣಾಧಿಕಾರಿಗಳು ಪುರಸ್ಕೃತ ಅಂಚೆ ಮತಗಳನ್ನೂ ಎಣಿಕೆಗೆ ಪರಿಗಣಿಸಿ ಡಿ.ಎನ್. ಜೀವರಾಜ್ ಅವರು ಗೆಲುವು ಸಾಧಿಸಿದ್ದಾರೆ ಎಂದು ಘೋಷಿಸಿದ್ದರು. ಈ ನಿರ್ಧಾರವನ್ನು ಪ್ರಶ್ನಿಸಿ ಟಿ.ಡಿ. ರಾಜೇಗೌಡ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ಚುನಾವಣಾ ಮತ ಎಣಿಕೆ ಕೊಠಡಿಯ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಿಲ್ಲದಿರುವ ವಿಚಾರವಾಗಿ ಸುಪ್ರೀಂಕೋರ್ಟ್ ಚುನಾವಣಾ ಆಯೋಗವನ್ನು ಪ್ರಶ್ನಿಸಿದೆ. ಮುಂದಿನ ವಿಚಾರಣೆಗೆ ಅಗತ್ಯ ದಾಖಲೆಗಳು ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಸಲ್ಲಿಸುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.
ಈ ಪ್ರಕರಣದ ಮುಂದಿನ ವಿಚಾರಣೆ 2027ರ ಫೆಬ್ರವರಿಯಲ್ಲಿ ನಡೆಯಲಿದ್ದು, ಚುನಾವಣಾ ಆಯೋಗ ನ್ಯಾಯಾಲಯಕ್ಕೆ ಸಲ್ಲಿಸಲಿರುವ ದಾಖಲೆಗಳು ಹಾಗೂ ಸುಪ್ರೀಂಕೋರ್ಟ್ನ ಮುಂದಿನ ನಿರ್ಧಾರದ ಕುರಿತು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿದೆ.













