
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿದ್ದ ಎಂ.ಎಸ್. ಅನಂತ್ ಅವರ ನಿಧನದಿಂದ ಮೂಡಿಗೆರೆ ತಾಲ್ಲೂಕಿನ ರಾಜಕೀಯ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.
ಮೂಡಿಗೆರೆ ಎಚ್‌ಪಿ ಗ್ಯಾಸ್ ಸಂಸ್ಥೆಯೊಂದಿಗೆ ಗುರುತಿಸಿಕೊಂಡಿದ್ದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡು ಕೆಪಿಸಿಸಿಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ತಮ್ಮ ರಾಜಕೀಯ ಅನುಭವ, ಸಂಘಟನಾ ಚಾತುರ್ಯ ಹಾಗೂ ವಾಗ್ಮಿತೆಯಿಂದ ಮುತ್ಸದ್ದಿ ನಾಯಕನಾಗಿ ಗುರುತಿಸಿಕೊಂಡಿದ್ದರು.

ಜಿಲ್ಲಾ ಬೌದ್ಧ ಮಹಾಸಭಾದ ಅಧ್ಯಕ್ಷರಾಗಿ, ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಸಂಸ್ಥೆಯ ಸಕ್ರಿಯ ಸದಸ್ಯರಾಗಿ, ಜಿಲ್ಲಾ ಪದವೀಧರ ಸಹಕಾರ ಸಂಘದ ನಿರ್ದೇಶಕರಾಗಿ ಹಾಗೂ ಮೂಡಿಗೆರೆ ಬಾಲಕರ ಪ್ರೌಢಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದರು.

ಜಿಲ್ಲಾ ಬುದ್ಧ ವಿಹಾರ ಹಾಗೂ ಮೂಡಿಗೆರೆ ಅಂಬೇಡ್ಕರ್ ಭವನ ನಿರ್ಮಾಣದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು, ಕಾಂಗ್ರೆಸ್ ಪಕ್ಷದ ಉತ್ತಮ ಬರಹಗಾರ, ಪ್ರಭಾವಿ ವಾಗ್ಮಿ ಹಾಗೂ ಸಮರ್ಥ ಸಂಘಟಕರಾಗಿದ್ದರು. ಸಮಾಜದ ಪ್ರಮುಖ ಕಾರ್ಯಗಳು, ಜನಪರ ಹೋರಾಟಗಳು ಹಾಗೂ ಸಾರ್ವಜನಿಕ ಸೇವಾ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿದ್ದು, ತಮ್ಮ ಸಾಮಾಜಿಕ ಕಳಕಳಿ ಮತ್ತು ಸೇವಾ ಮನೋಭಾವದಿಂದ ಜನರ ಪ್ರೀತಿ, ವಿಶ್ವಾಸ ಹಾಗೂ ಗೌರವಕ್ಕೆ ಪಾತ್ರರಾಗಿದ್ದರು.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ, ಸ್ನೇಹಿತರು ಮತ್ತು ಒಡನಾಡಿಗಳನ್ನು ಅಗಲಿದ್ದಾರೆ.
ಮಾಜಿ ಸಚಿವರಾದ ಮೋಟಮ್ಮ, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ದಾರದಹಳ್ಳಿ ವಿಎಸ್‌ಎಸ್‌ಎನ್‌ನ ಮಾಜಿ ನಿರ್ದೇಶಕ ಎಂ.ಎಸ್. ಆನಂದ್ ಸೇರಿದಂತೆ ಕುಟುಂಬದ ಸದಸ್ಯರು, ಬಂಧುಗಳು, ರಾಜಕೀಯ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಎಂ.ಎಸ್. ಅನಂತ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)













