ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಳೆದ 2023ರ ವಿಧಾನಸಭಾ ಚುನಾವಣೆಯ ವೇಳೆ ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಗಾಯತ್ರಿ ಶಾಂತೇಗೌಡ ಅವರಿಗೆ ಆ ಸಮಯದಲ್ಲಿ ಟಿಕೆಟ್ ಸಿಗದೇ ಇದ್ದರೂ, ಮುಂದೆ ಪರಿಷತ್ ಸದಸ್ಯೆಯಾಗಿ ಸಚಿವೆಯಾಗುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದರು. ಇದೀಗ ಆ ಭರವಸೆ ನಿಜವಾಗಿದ್ದು, ಮಲೆನಾಡಿನ ಹಿರಿಯ ನಾಯಕಿಗೆ ಸಚಿವ ಸಂಪುಟದಲ್ಲಿ ಪ್ರಮುಖ ಸ್ಥಾನ ದೊರೆತಿದೆ.
ಇತ್ತೀಚೆಗೆ ಹೈಕೋರ್ಟ್ ಆದೇಶದಂತೆ ವಿಧಾನಪರಿಷತ್ ಸದಸ್ಯೆಯಾಗಿ ಆಯ್ಕೆಯಾಗಿರುವ ಗಾಯತ್ರಿ ಶಾಂತೇಗೌಡ ಅವರು ಉಪಸಭಾಪತಿ ಪ್ರಾಣೇಶ್ ವಿರುದ್ಧ ನಡೆದ ರೋಚಕ ಚುನಾವಣೆಯಲ್ಲಿ 9 ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದರು.


ದೀರ್ಘ ರಾಜಕೀಯ ಅನುಭವ
ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ 1963ರ ಏಪ್ರಿಲ್ 2ರಂದು ಜನಿಸಿದ ಗಾಯತ್ರಿ ಶಾಂತೇಗೌಡ ಅವರು ಪಿಯುಸಿವರೆಗೆ ಶಿಕ್ಷಣ ಪಡೆದಿದ್ದಾರೆ. ಕುರುಬ ಸಮುದಾಯಕ್ಕೆ ಸೇರಿದ ಇವರು ಸ್ಥಳೀಯ ಸಂಸ್ಥೆಗಳ ಕ್ಷೇತ್ರವನ್ನು ಪ್ರತಿನಿಧಿಸಿ ಮೂರು ಬಾರಿ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದು, ಎರಡು ಬಾರಿ ಜಯಗಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಯಾಗಿಯೂ ಸೇವೆ ಸಲ್ಲಿಸಿರುವ ಅವರು ಸಂಘಟನೆ ಹಾಗೂ ಆಡಳಿತಾತ್ಮಕ ಕ್ಷೇತ್ರದಲ್ಲಿ ಉತ್ತಮ ಅನುಭವ ಹೊಂದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದೀರ್ಘಕಾಲದಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಗಾಯತ್ರಿ ಶಾಂತೇಗೌಡ ಅವರು ಗ್ರಾಮೀಣ ಮತ್ತು ಮಹಿಳಾ ಸಂಘಟನೆಗಳಲ್ಲಿ ಪ್ರಭಾವಿ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ
ಗಾಯತ್ರಿ ಶಾಂತೇಗೌಡ ಅವರ ಸಚಿವ ಸ್ಥಾನದ ಘೋಷಣೆ ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸುತ್ತಿದ್ದಾರೆ.
ಮಲೆನಾಡು ಭಾಗಕ್ಕೆ ಸಚಿವ ಸಂಪುಟದಲ್ಲಿ ಬಲವಾದ ಪ್ರತಿನಿಧಿತ್ವ ದೊರೆತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.













