
ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪ ಮಂಗಳವಾರ ಸುರಿದ ಭಾರೀ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ಸಾಗಿಸುತ್ತಿದ್ದ ಲಾರಿ ಹಾಗೂ ಬೊಲೆರೋ ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೊಲೆರೋ ವಾಹನದಲ್ಲಿದ್ದ ನಾಲ್ವರು ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ಮಂಗಳೂರಿನಿಂದ ಹಿರೇಬೈಲ್ ಕಡೆಗೆ ತೆರಳುತ್ತಿದ್ದ ಬೊಲೆರೋ ವಾಹನ ಅಪಘಾತಕ್ಕೀಡಾಗಿದ್ದು, ಗಾಯಗೊಂಡವರನ್ನು ಸ್ಥಳೀಯರ ನೆರವಿನಿಂದ ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅವರ ಆರೋಗ್ಯ ಸ್ಥಿತಿ ಅಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.

ಅಪಘಾತದ ಪರಿಣಾಮ ಬಾಳೂರು–ಕಳಸ ಮುಖ್ಯರಸ್ತೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಟ್ರಾಫಿಕ್ ಜಾಮ್ ಉಂಟಾಯಿತು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಸ್ಥಳೀಯರು ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಪುನಃ ಸುಗಮಗೊಳಿಸಿದರು.

ಈ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ವರದಿ- ತನು ಕೊಟ್ಟಿಗೆಹಾರ)














