
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಇಲ್ಲಿನ ಕೆ.ಪಿ.ಎಸ್. ಸರ್ಕಾರಿ ಪ್ರೌಢಶಾಲೆ ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 99 ಫಲಿತಾಂಶ ಸಾಧಿಸಿ ಗಮನಸೆಳೆದಿದೆ.
ಶಾಲೆಯ ವಿದ್ಯಾರ್ಥಿ ಸರವಣ್ ಗೌಡ ಶೇ. 98.72 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡರೆ, ಅನನ್ಯ ಜಿ. ಶೇ. 97.76 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಧೀರಜ್ ಸಿ.ಪಿ. ಹಾಗೂ ಆದ್ಯಾ ಇಬ್ಬರೂ ಶೇ. 96 ಅಂಕಗಳೊಂದಿಗೆ ತೃತೀಯ ಸ್ಥಾನದಲ್ಲಿ ತೇರ್ಗಡೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಒಟ್ಟು 91 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 19 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 51 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 14 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ 6 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಹತ್ತು ವಿದ್ಯಾರ್ಥಿಗಳು ಪ್ರಥಮ ಭಾಷೆಯಲ್ಲಿ ಶೇ. 100 ಅಂಕಗಳನ್ನು ಪಡೆದಿದ್ದು, 7 ವಿದ್ಯಾರ್ಥಿಗಳು ತೃತೀಯ ಭಾಷೆಯಲ್ಲಿ 100ಕ್ಕೆ 100 ಅಂಕ ಗಳಿಸಿ ವಿಶೇಷ ಸಾಧನೆ ಮೆರೆದಿದ್ದಾರೆ.
ಶಾಲೆಯ ಉಪಪ್ರಾಂಶುಪಾಲರಾದ ರಾಘವೇಂದ್ರ ಎನ್.ಜಿ., ಎಸ್.ಡಿ.ಎಮ್.ಸಿ. ಅಧ್ಯಕ್ಷ ಶಿವಾನಂದ್ ಹಾಗೂ ಸದಸ್ಯರು, ಶಿಕ್ಷಕರು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದ್ದಾರೆ. ಶಿಕ್ಷಕರ ಮಾರ್ಗದರ್ಶನ ಹಾಗೂ ಎಸ್.ಡಿ.ಎಮ್.ಸಿ.ಯ ಪ್ರೋತ್ಸಾಹದಿಂದ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದು, ಖಾಸಗಿ ಶಾಲೆಗಳ ಪೈಪೋಟಿಯ ನಡುವೆ ಸರ್ಕಾರಿ ಶಾಲೆಯ ಈ ಸಾಧನೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಈ ಸಾಧನೆಗೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿ ಎಲ್ಲರೂ ಅಭಿನಂದನಾರ್ಹರು ಎಂದು ಎಸ್.ಡಿ.ಎಮ್.ಸಿ. ಅಧ್ಯಕ್ಷ ಶಿವಾನಂದ್ ಮತ್ತು ಸದಸ್ಯ ಪ್ರಕಾಶ್ ಸಿ.ಹೆಚ್. ಸಂತಸ ವ್ಯಕ್ತಪಡಿಸಿದ್ದಾರೆ.















