
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರದ ಸ್ಥಿತಿ ಅತ್ಯಂತ ದುರ್ಬಲವಾಗಿದ್ದು, ಪುಟಾಣಿ ಮಕ್ಕಳು ಅಪಾಯದ ನಡುವೆ ಕಲಿಯಬೇಕಾದ ಪರಿಸ್ಥಿತಿ ಎದುರಾಗಿದೆ.
ಇದನ್ನೂ ಓದಿ: ಬಿಪಿಎಲ್ ಕಾರ್ಡುದಾರರಿಗೆ ಬಜೆಟ್‌ನಲ್ಲಿ ಮಹತ್ವದ ಘೋಷಣೆ; ಮಿಸ್ ಮಾಡ್ದೆ ಈ ಸುದ್ದಿ ಓದಿ

ಕಟ್ಟಡದ ಗೋಡೆಗಳು ಹಲವೆಡೆ ಬಿರುಕು ಬಿಟ್ಟಿದ್ದು, ಆ ಬಿರುಕುಗಳಲ್ಲಿ ಹಾವು ಸೇರಿದಂತೆ ವಿಷಜಂತುಗಳು ಹಾಗೂ ಹುಳುಗಳು ಸೇರಿಕೊಳ್ಳುತ್ತಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ಜೊತೆಗೆ ಮೇಲ್ಛಾವಣಿಯ ಹೆಂಚುಗಳು ಒಡೆದು ಹೋಗಿರುವುದರಿಂದ ಕಟ್ಟಡದ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಅಂಗನವಾಡಿಯಲ್ಲಿ ಮೀಟರ್ ಬೋರ್ಡ್ ಅಳವಡಿಸಿದ್ದರೂ ವಿದ್ಯುತ್ ವ್ಯವಸ್ಥೆ ಇಲ್ಲದಿರುವುದು ಮತ್ತೊಂದು ಸಮಸ್ಯೆಯಾಗಿದೆ. ಶಿಥಿಲಗೊಂಡ ಕಟ್ಟಡದಲ್ಲೇ ಮಕ್ಕಳಿಗೆ ಪಾಠ ನಡೆಸಲಾಗುತ್ತಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ.

ಈ ಅಂಗನವಾಡಿಯಲ್ಲಿ ಮುಖ್ಯವಾಗಿ ಕೂಲಿ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರು ಚಿಂತೆಯನ್ನು ವ್ಯಕ್ತಪಡಿಸಿದ್ದಾರೆ. ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಇದನ್ನೂ ಓದಿ: ಅಡಿಕೆ ಬೆಳೆಗಾರರಿಗೆ ಬಜೆಟ್‌ನಲ್ಲಿ ಶುಭ ಸುದ್ದಿ; ಎಲೆ ಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ 10 ಕೋಟಿ ರೂ.
ಶೀಘ್ರದಲ್ಲೇ ಅಂಗನವಾಡಿ ಕಟ್ಟಡವನ್ನು ದುರಸ್ತಿ ಮಾಡುವುದು ಅಥವಾ ಹೊಸ ಕಟ್ಟಡ ನಿರ್ಮಿಸಿ ಪುಟಾಣಿ ಮಕ್ಕಳಿಗೆ ಸುರಕ್ಷಿತ ವಾತಾವರಣದಲ್ಲಿ ಕಲಿಯುವ ಅವಕಾಶ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
















