
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) 56 ಕಾಡಾನೆಗಳನ್ನು ಒಂದು ತಿಂಗಳೊಳಗೆ ಸೆರೆಹಿಡಿದು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ಸರ್ಕಾರದ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು. ಇಲ್ಲದಿದ್ದರೆ ಶೃಂಗೇರಿ ವಿಧಾನಸಭಾ ಕ್ಷೇತ್ರದಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.
ಬೇಲೂರು ತಾಲೂಕಿನಲ್ಲಿ ಕಾಡಾನೆಗಳ ದಾಳಿಗೆ ಕೇವಲ ಮೂರು ದಿನಗಳ ಅಂತರದಲ್ಲಿ ಇಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಮೂಡಿಗೆರೆ-ಬೇಲೂರು ರಸ್ತೆಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಶಿವಲಿಂಗೇಗೌಡ ಅವರು 56 ಕಾಡಾನೆಗಳನ್ನು ಒಂದು ತಿಂಗಳೊಳಗೆ ಭದ್ರಾ ಅಭಯಾರಣ್ಯಕ್ಕೆ ಓಡಿಸಲು ಸರ್ಕಾರ ಆದೇಶಿಸಿದೆ ಎಂದು ಹೇಳಿರುವುದು ಶೃಂಗೇರಿ ಕ್ಷೇತ್ರದ ಜನರಲ್ಲಿ ತೀವ್ರ ಆತಂಕ ಮೂಡಿಸಿದೆ.
ಈ ಆದೇಶ ಜಾರಿಯಾದರೆ ಶೃಂಗೇರಿ ಕ್ಷೇತ್ರದ ರೈತರು ಮತ್ತಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ. ಈಗಾಗಲೇ ಕಾಡಾನೆಗಳ ಹಾವಳಿಯಿಂದ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಹೊಸದಾಗಿ ಆನೆಗಳನ್ನು ಸ್ಥಳಾಂತರಿಸುವುದರಿಂದ ಸಮಸ್ಯೆ ಇನ್ನಷ್ಟು ಗಂಭೀರವಾಗುವ ಸಾಧ್ಯತೆಯಿದೆ. ಆದ್ದರಿಂದ ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಶಾಸಕರು ಹಾಗೂ ಸರ್ಕಾರ ಆದೇಶ ಹಿಂಪಡೆದಿರುವ ಕುರಿತು ಅಧಿಕೃತ ಆದೇಶವನ್ನು ತಕ್ಷಣವೇ ಹೊರಡಿಸಬೇಕು. ಇಲ್ಲದಿದ್ದರೆ ಶೃಂಗೇರಿ ಕ್ಷೇತ್ರದಾದ್ಯಂತ ಬೃಹತ್ ಮಟ್ಟದ ಹೋರಾಟವನ್ನು ಬಿಜೆಪಿ ಕೈಗೆತ್ತಿಕೊಳ್ಳಲಿದೆ. ಜನರ ಆತಂಕವನ್ನು ನಿರ್ಲಕ್ಷಿಸಿ ಸರ್ಕಾರ ಹಾಗೂ ಶಾಸಕರು ಮುಂದುವರಿದರೆ, ಮುಂದಿನ ಹೋರಾಟದ ಸಂಪೂರ್ಣ ಹೊಣೆಯನ್ನು ಸರ್ಕಾರವೇ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಶೃಂಗೇರಿ ಕ್ಷೇತ್ರದಲ್ಲಿ ಈ ಹಿಂದೆಯೂ ಕಾಡಾನೆಗಳ ದಾಳಿಗೆ ಜನರು ಬಲಿಯಾಗಿದ್ದು, ಭದ್ರಾ ಅಭಯಾರಣ್ಯದ ಸುತ್ತಮುತ್ತಲಿನ ರೈತರು ಆನೆಗಳ ಹಾವಳಿಯಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಈವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬುದು ರೈತರ ಅಸಮಾಧಾನವಾಗಿದೆ.
ಈಗಾಗಲೇ ಕಾಡಾನೆಗಳ ಹಾವಳಿಯಿಂದ ನಲುಗಿರುವ ರೈತರ ಮೇಲೆ ಮತ್ತಷ್ಟು ಆನೆಗಳನ್ನು ಸ್ಥಳಾಂತರಿಸುವ ಮೂಲಕ ಹೊರೆ ಹೆಚ್ಚಿಸುವ ಬದಲು, ಕಾಡಾನೆಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರ ಹಾಗೂ ಶಾಸಕರು ಮುಂದಾಗಬೇಕು ಎಂದು ರೈತರು ಆಗ್ರಹಿಸಿದ್ದಾರೆ. (ವರದಿ: ಶಶಿ ಬೆತ್ತದಕೊಳಲು)













