ಅಜ್ಜಂಪುರ: (ನ್ಯೂಸ್ ಮಲ್ನಾಡ್ ವರದಿ) ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಅನಾಹುತ ಸಂಭವಿಸಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.
ಸಚಿವ ಕೆ.ಜೆ. ಜಾರ್ಜ್ ಅವರು ಬರ ಪರಿಸ್ಥಿತಿ ವೀಕ್ಷಣೆಗಾಗಿ ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗದ ಪ್ರವಾಸದಲ್ಲಿದ್ದರು. ಈ ಸಂದರ್ಭದಲ್ಲಿ ಅವರು ಅಮೃತ ಮಹಲ್ ತಳಿ ಸಂವರ್ಧನ ಕೇಂದ್ರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಸಚಿವರ ಕಾರಿನ ಮುಂಭಾಗದಲ್ಲಿ ಸಂಚರಿಸುತ್ತಿದ್ದ ಪೊಲೀಸ್ ವಾಹನವು ತಿರುವಿನಲ್ಲಿ ಚಾಲಕ ಬ್ರೇಕ್ ಹಾಕಿದಾಗ ನಿಯಂತ್ರಣ ತಪ್ಪಿ ಅಮೃತ ಮಹಲ್ ತಳಿ ಸಂವರ್ಧನ ಕೇಂದ್ರದ ಗೇಟಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ವಾಹನದ ಮುಂಭಾಗಕ್ಕೆ ಹಾನಿಯಾಗಿದೆ.
ಅಪಘಾತ ಸಂಭವಿಸಿದ ತಕ್ಷಣ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಸಚಿವರ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ ಎಂದು ಮೂಲಗಳು ತಿಳಿಸಿವೆ.












