ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ತಾಲ್ಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೋಳೂರು ಕ್ರಾಸ್ ಸಮೀಪ ಹಿಂದೂ ಸಮಾಜೋತ್ಸವಕ್ಕೆ ಅಳವಡಿಸಲಾಗಿದ್ದ ಬ್ಯಾನರ್ ಹಾಗೂ ಕೇಸರಿ ಧ್ವಜವನ್ನು ಕಿಡಿಗೇಡಿಗಳು ಹರಿದು ಹಾನಿಗೊಳಿಸಿದ ಘಟನೆ ನಡೆದಿದೆ.

ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ನಾಳೆ ಶೃಂಗೇರಿ ತಾಲ್ಲೂಕಿನ ಮರಿಗೇಬೈಲು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಹಿಂದೂ ಸಮಾಜೋತ್ಸವ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಬ್ಯಾನರ್ ಹಾಗೂ ಧ್ವಜಗಳನ್ನು ಅಳವಡಿಸಲಾಗಿತ್ತು. ಆದರೆ ಕಾರ್ಯಕ್ರಮಕ್ಕೂ ಮುನ್ನವೇ ದುಷ್ಕರ್ಮಿಗಳು ಬ್ಯಾನರ್ಗೆ ಬ್ಲೇಡ್ ಹಾಕಿ ಹರಿದಿದ್ದು, ಕಟ್ಟಿದ್ದ ಹಗ್ಗವನ್ನು ಬಿಚ್ಚಲು ಸಹ ಯತ್ನಿಸಿದ್ದಾರೆ. ನಿನ್ನೆ ರಾತ್ರಿ ಸುಮಾರು 12.30ರವರೆಗೆ ಬ್ಯಾನರ್ ಅಳವಡಿಸಿದ ಸ್ಥಳದಲ್ಲೇ ಯುವಕರು ಇದ್ದರು. ಅವರು ಮನೆಗೆ ಹೋದ ಬಳಿಕ ಬೆಳಗಿನ ಜಾವ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.

ಹಿಂದೂ ಸಮಾಜೋತ್ಸವ ಸಮಿತಿಯ ಅಧ್ಯಕ್ಷ ಪ್ರದೀಪ್ ಚೋಳರಮನೆ ಅವರು ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಾಹಿತಿ ದೊರಕುತ್ತಿದ್ದಂತೆಯೇ ಶೃಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.












