ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ತಾಲ್ಲೂಕಿನಲ್ಲಿ ಸಂಭವಿಸಬಹುದಾದ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ನರಸಿಂಹರಾಜಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಟಿ.ಡಿ. ರಾಜೇಗೌಡ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ, ತಾಲ್ಲೂಕಿನ ಪ್ರಸ್ತುತ ಪರಿಸ್ಥಿತಿ, ಇದುವರೆಗೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು ಹಾಗೂ ಸಂಭವನೀಯ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಅಗತ್ಯ ಸಿದ್ಧತೆಗಳ ಕುರಿತು ಸಮಗ್ರ ಚರ್ಚೆ ನಡೆಸಿದರು. ಅಲ್ಲದೆ, ಮುಂದಿನ ದಿನಗಳಲ್ಲಿ ಅನುಸರಿಸಬೇಕಾದ ಕಾರ್ಯಯೋಜನೆಗಳ ಬಗ್ಗೆಯೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಟಿ.ಡಿ. ರಾಜೇಗೌಡ ಅವರು, ಸಾರ್ವಜನಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ಅತಿವೃಷ್ಟಿ ಅಥವಾ ಅನಾವೃಷ್ಟಿಯಿಂದ ಜನರಿಗೆ ಯಾವುದೇ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತುರ್ತು ಪರಿಸ್ಥಿತಿಗಳ ಸಂದರ್ಭದಲ್ಲಿ ಇಲಾಖೆಗಳ ನಡುವೆ ಸಮನ್ವಯತೆ ಕಾಪಾಡಿಕೊಂಡು ಕಾರ್ಯನಿರ್ವಹಿಸುವಂತೆ ಹಾಗೂ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. (ವರದಿ- ಶಶಿ ಬೆತ್ತದಕೊಳಲು)














