ಜಯಪುರ: ಶಾಸಕರ ವಿರುದ್ಧ ಅಸಮಾಧಾನ: ಜಲದುರ್ಗದಲ್ಲಿ 25ಕ್ಕೂ ಹೆಚ್ಚು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿಂದ ರಾಜೀನಾಮೆ

ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಮೇಗುಂದ ಹೋಬಳಿಯ ಜಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಲದುರ್ಗ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದ್ದು, ಶಾಸಕರ ಕಾರ್ಯವೈಖರಿ ಹಾಗೂ ಸ್ಪಂದನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ 25ಕ್ಕೂ ಹೆಚ್ಚು ಮುಖಂಡರು ಮತ್ತು ಕಾರ್ಯಕರ್ತರು ಪಕ್ಷದ ವಿವಿಧ ಹುದ್ದೆಗಳು ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಜಲದುರ್ಗ ಕಾಂಗ್ರೆಸ್ ಪಕ್ಷದ ಬೂತ್ ಸಮಿತಿ ಅಧ್ಯಕ್ಷರಾದ ಐನಾರ ಹಾಗೂ ಸಂದೀಪ್ ಅವರ ನೇತೃತ್ವದಲ್ಲಿ ಈ ಸಾಮೂಹಿಕ ರಾಜೀನಾಮೆ ನಡೆದಿದೆ.

ಗ್ರಾಮ ಪಂಚಾಯಿತಿ ಚುನಾವಣೆಯಿಂದ ಹಿಡಿದು ವಿಧಾನಸಭಾ ಚುನಾವಣೆಯವರೆಗೂ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ್ದೇವೆ. ಆದರೆ, ಗ್ರಾಮದಲ್ಲಿನ ವಿವಿಧ ಅಭಿವೃದ್ಧಿ ಕೆಲಸಗಳು ಹಾಗೂ ಸಮಸ್ಯೆಗಳ ಕುರಿತು ಶಾಸಕರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಸೂಕ್ತ ಸ್ಪಂದನೆ ದೊರೆತಿಲ್ಲ. ಅಲ್ಲದೆ, ನಮ್ಮ ಕೆಲಸಗಳಿಗೆ ತಕ್ಕ ಗೌರವವೂ ಸಿಗದಿರುವುದು ತೀವ್ರ ಬೇಸರ ತಂದಿದೆ ಎಂದು ರಾಜೀನಾಮೆ ಪತ್ರದಲ್ಲಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಕ್ಷದ ಸಂಘಟನೆ ಬಲಪಡಿಸಲು ಹಾಗೂ ಅಭ್ಯರ್ಥಿಗಳ ಗೆಲುವಿಗೆ ಪ್ರಾಮಾಣಿಕವಾಗಿ ದುಡಿದಿದ್ದರೂ ತಮ್ಮ ಅಹವಾಲುಗಳಿಗೆ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಮನನೊಂದು ಸ್ವಯಂಪ್ರೇರಿತವಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಜಲದುರ್ಗದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ ಸ್ಥಳೀಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಪಕ್ಷದ ಮುಖಂಡರು ಈ ಬೆಳವಣಿಗೆಯನ್ನು ಹೇಗೆ ನಿಭಾಯಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. (ವರದಿ: ಶಶಿ ಬೆತ್ತದಕೊಳಲು)

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.