491 ರಸ್ತೆ ಕಾಮಗಾರಿಗಳ ದಾಖಲೆ: ಬಿಜೆಪಿ ಪಾದಯಾತ್ರೆಗೆ ಶಾಸಕಿ ನಯನಾ ಮೋಟಮ್ಮ ತಿರುಗೇಟು

ಚಿಕ್ಕಮಗಳೂರು:(ನ್ಯೂಸ್ ಮಲ್ನಾಡ್ ವರದಿ) ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಲವು ರಸ್ತೆಗಳು ಹದಗೆಟ್ಟಿರುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ದುರಸ್ತಿ ಹಾಗೂ ಅಭಿವೃದ್ಧಿಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಆಲೂರು ಪಟ್ಟಣದಿಂದ ಚಿಕ್ಕಮಗಳೂರಿನವರೆಗೆ ಸುಮಾರು 18 ಕಿಲೋಮೀಟರ್ ಪಾದಯಾತ್ರೆ ನಡೆಸಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ತಮ್ಮ ಕ್ಷೇತ್ರದ ವ್ಯಾಪ್ತಿ ರಾಜ್ಯದಲ್ಲೇ ಅತ್ಯಂತ ವಿಸ್ತಾರವಾಗಿದ್ದು, 239 ಕಂದಾಯ ಗ್ರಾಮಗಳು ಸೇರಿದಂತೆ ಒಟ್ಟು 1,020 ಹಳ್ಳಿಗಳು ಹಾಗೂ ಕುಗ್ರಾಮಗಳನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

ಇಂತಹ ವಿಶಾಲ ಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳಲ್ಲಿ 491 ರಸ್ತೆ ಕಾಮಗಾರಿಗಳನ್ನು ಕೈಗೊಂಡು ನಿರ್ಮಿಸಲಾಗಿದೆ. ಈ ಪ್ರಮಾಣದಲ್ಲಿ ಈ ಹಿಂದಿನ ಯಾವ ಶಾಸಕರೂ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿಲ್ಲ ಎಂದು ಅವರು ಹೇಳಿದ್ದಾರೆ. ಇದಕ್ಕೆ ಸಂಬಂಧಿಸಿದ ನಿಖರ ಅಂಕಿ-ಅಂಶಗಳು ಹಾಗೂ ದಾಖಲೆಗಳು ತಮ್ಮ ಬಳಿ ಇರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಕ್ಷೇತ್ರದ ಇನ್ನಷ್ಟು ರಸ್ತೆಗಳನ್ನು ಅಭಿವೃದ್ಧಿಪಡಿಸುವಂತೆ ಸಾರ್ವಜನಿಕರಿಂದ ಬರುತ್ತಿರುವ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಯೋಜನೆಗಳನ್ನು ಈಗಾಗಲೇ ರೂಪಿಸಲಾಗಿದೆ. ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ವ್ಯಾಪ್ತಿಯ 100 ಕಿಲೋಮೀಟರ್ ರಸ್ತೆ ಅಭಿವೃದ್ಧಿಗಾಗಿ ಕ್ರಿಯಾ ಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಅದೇ ರೀತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್) ವ್ಯಾಪ್ತಿಯ ರಸ್ತೆಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಗುರುತಿಸಲಾಗಿರುವ ರಸ್ತೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಕ್ರೋಢೀಕರಿಸಿ ಸರ್ಕಾರಕ್ಕೆ ಸಲ್ಲಿಸುವ ಪ್ರಕ್ರಿಯೆ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.