ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಸುಮಾರು 11 ವರ್ಷಗಳ ಬಳಿಕ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸಮಿತಿಯನ್ನು ಪುನರ್ ರಚಿಸಿ ವಿವಿಧ ಹುದ್ದೆಗಳಿಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ ಎಂದು ಅಧ್ಯಕ್ಷ ರಮೇಶ್ ಭಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೂತನ ಸಮಿತಿಯಲ್ಲಿ ಕಾರ್ಯಾಧ್ಯಕ್ಷರಾಗಿ ಅಜಿತ್ ಅಣ್ಕುಳಿ, ಕಾರ್ಯದರ್ಶಿಗಳಾಗಿ ಸುಂದರೇಶ್ ಮಂಡಗದ್ದೆ ಹಾಗೂ ತ್ರಿಮೂರ್ತಿ ಹೊಸತೋಟ ಅವರನ್ನು ನೇಮಕ ಮಾಡಲಾಗಿದೆ. ಕಿಗ್ಗಾ ಹೋಬಳಿ ಅಧ್ಯಕ್ಷರಾಗಿ ರಾಜ್‌ಕುಮಾರ್ ಯಡದಳ್ಳಿ, ಕಸಬಾ ಹೋಬಳಿ ಅಧ್ಯಕ್ಷರಾಗಿ ಲಕ್ಷ್ಮೀಶ್ ಅಣ್ಕುಳಿ ಹಾಗೂ ಖಜಾಂಚಿಯಾಗಿ ಸುಬ್ರಮಣ್ಯ ಭಟ್ ಅಂಬಲಮನೆ ಅವರನ್ನು ಆಯ್ಕೆ ಮಾಡಲಾಗಿದೆ.

ಇದರ ಜೊತೆಗೆ ಸಹ ಕಾರ್ಯದರ್ಶಿಗಳು, ಉಪಾಧ್ಯಕ್ಷರು, ಸಂಘಟನಾ ಕಾರ್ಯದರ್ಶಿಗಳು, ಸಾಂಸ್ಕೃತಿಕ ಕಾರ್ಯದರ್ಶಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನೂ ನೇಮಕ ಮಾಡಿ ಆದೇಶಿಸಲಾಗಿದೆ.
ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಹೋಬಳಿ ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಹೊಸ ಸಮಿತಿಗಳನ್ನು ರಚಿಸಲಾಗುವುದು. ಎಲ್ಲ ಕಾರ್ಯಕರ್ತರಿಗೂ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ರಮೇಶ್ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














