
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಿದರೂ ಸಮಾಜಸೇವೆಯ ಕಾರ್ಯಗಳನ್ನು ಮುಂದುವರಿಸುವ ಉದ್ದೇಶದಿಂದ ಇನ್ಫಿನಿಟಿ ಟ್ರಸ್ಟ್ ಸ್ಥಾಪಿಸಿದ್ದು, ಇದರ ಮೂಲಕ ಮುಂದಿನ ದಿನಗಳಲ್ಲಿ ಹಲವು ಜನಪರ ಹಾಗೂ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬಿ. ಹೊಸಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್.ಎಂ. ಆಶ್ರಿತ್ ಗೌಡ ತಿಳಿಸಿದರು.
ತಾಲೂಕಿನ ಬಿ. ಹೊಸಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು.

ಈ ಹಿಂದೆ ಗ್ರಾಮ ಪಂಚಾಯಿತಿ ಚುನಾಯಿತ ಸದಸ್ಯನಾಗಿ ಹಾಗೂ ಅಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಇದೀಗ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಿದರೂ ಸಮಾಜಸೇವೆಯ ಕಾರ್ಯಗಳಿಗೆ ವಿರಾಮ ನೀಡಬಾರದು ಎಂಬ ಆಶಯದಿಂದ ಇನ್ಫಿನಿಟಿ ಟ್ರಸ್ಟ್ ಸ್ಥಾಪಿಸಲಾಗಿದೆ. ಈ ಟ್ರಸ್ಟ್ ಮೂಲಕ ಮುಂದಿನ ದಿನಗಳಲ್ಲಿ ಇನ್ನಷ್ಟು ಜನಪರ ಕಾರ್ಯಗಳನ್ನು ಕೈಗೊಳ್ಳುವ ಉದ್ದೇಶವಿದೆ. ಇದರ ಮೊದಲ ಹೆಜ್ಜೆಯಾಗಿ ಸ್ನೇಹಿತರು ಹಾಗೂ ದಾನಿಗಳ ಸಹಕಾರದೊಂದಿಗೆ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಸಮಾಜದ ಒಳಿತಿಗಾಗಿ ಸಾಧ್ಯವಾದಷ್ಟು ಸೇವಾ ಕಾರ್ಯಗಳನ್ನು ನಡೆಸುವ ಸಂಕಲ್ಪ ಹೊಂದಿದ್ದು, ಮುಂದಿನ ದಿನಗಳಲ್ಲಿಯೂ ಇಂತಹ ಕಾರ್ಯಕ್ರಮಗಳನ್ನು ಮುಂದುವರಿಸಲಾಗುವುದು ಎಂದು ಆಶ್ರಿತ್ ಗೌಡ ತಿಳಿಸಿದರು. (ವರದಿ- ತನು ಕೊಟ್ಟಿಗೆಹಾರ)













