ಕಳಸ: ಗ್ರಾಮಸ್ಥರ ಪ್ರತಿಭಟನೆಗೆ ಮಣಿದ ಅಧಿಕಾರಿಗಳು; ಕಾಮಗಾರಿ ಆರಂಭ

ಕಳಸ: (ನ್ಯೂಸ್ ಮಲ್ನಾಡ್ ವರದಿ) ಮೆಣಸಿನಹಾಡ್ಯ ಗ್ರಾಮದ ಹೋರಿಕೊಂಡ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಸೇತುವೆ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಆಕ್ರೋಶಗೊಂಡ ಗ್ರಾಮಸ್ಥರು ಮಂಗಳವಾರ ಮೆಣಸಿನಹಾಡ್ಯದಲ್ಲಿ ಹೊರನಾಡು–ಶೃಂಗೇರಿ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದರು.

ಕಳೆದ ಏಪ್ರಿಲ್‌ನಲ್ಲಿ ಆರಂಭಗೊಂಡಿದ್ದ ಸೇತುವೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಕಳೆದ ಐದು ತಿಂಗಳಿಂದ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಹೋರಿಕೊಂಡ ಪ್ರದೇಶದ ಗ್ರಾಮಸ್ಥರು ಸಂಪರ್ಕ ರಸ್ತೆ ಇಲ್ಲದೆ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೃಷಿಕರು ಕೃಷಿ ಸಲಕರಣೆ ಹಾಗೂ ಗೊಬ್ಬರವನ್ನು ತಲೆ ಮೇಲೆ ಹೊತ್ತುಕೊಂಡು ಸಾಗಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅನಾರೋಗ್ಯ ಪೀಡಿತರನ್ನು ಕುರ್ಚಿಯಲ್ಲಿ ಕೂರಿಸಿ ಹೊತ್ತುಕೊಂಡು ಬರಬೇಕಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.

ಸ್ಥಳಕ್ಕೆ ಆಗಮಿಸಿದ ಪಂಚಾಯತ್‌ರಾಜ್ ಇಲಾಖೆಯ ಕಿರಿಯ ಎಂಜಿನಿಯರ್ ಹಾಗೂ ಗುತ್ತಿಗೆದಾರರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. ಮಳೆಯ ಕಾರಣದಿಂದ ಕಾಮಗಾರಿ ಆರಂಭಿಸಲು ಸಾಧ್ಯವಾಗಿಲ್ಲ ಎಂದು ಗುತ್ತಿಗೆದಾರ ಸಮಜಾಯಿಷಿ ನೀಡಿದಾಗ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಹತ್ತು ವರ್ಷಗಳಲ್ಲಿಯೇ ಈ ವರ್ಷ ಮಳೆ ಪ್ರಮಾಣ ಕಡಿಮೆಯಿದೆ. ಇಂತಹ ಪರಿಸ್ಥಿತಿಯಲ್ಲಿಯೂ ಕಾಮಗಾರಿ ನಡೆಸಲು ಆಸಕ್ತಿ ತೋರದಿರುವುದೇಕೆ? ಎಂದು ಪ್ರಶ್ನಿಸಿದ ಗ್ರಾಮಸ್ಥರು, ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದರು.

ಕಾರ್ಮಿಕರ ಕೊರತೆಯಿಂದ ಕಾಮಗಾರಿ ವಿಳಂಬವಾಗಿದ್ದು, ಎರಡು ದಿನಗಳೊಳಗೆ ಕೆಲಸ ಆರಂಭಿಸಲಾಗುವುದು ಎಂದು ಕಿರಿಯ ಎಂಜಿನಿಯರ್ ಭರವಸೆ ನೀಡಿದರು. ಆದರೆ, ಈ ಭರವಸೆಗೆ ಒಪ್ಪದ ಗ್ರಾಮಸ್ಥರು ಕಾಮಗಾರಿ ಆರಂಭವಾಗುವವರೆಗೂ ರಸ್ತೆ ತೆರವುಗೊಳಿಸುವುದಿಲ್ಲ ಎಂದು ಪಟ್ಟು ಹಿಡಿದು ಸುಮಾರು ಅರ್ಧ ಗಂಟೆ ರಸ್ತೆ ತಡೆ ನಡೆಸಿದರು. ಇದರಿಂದ ಹೊರನಾಡು–ಶೃಂಗೇರಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಪ್ರವಾಸಿಗರು ಹಾಗೂ ವಾಹನ ಸವಾರರು ಅನಾನುಕೂಲ ಅನುಭವಿಸಿದರು.

ನಕ್ಸಲ್ ಚಳವಳಿಯ ಸಂದರ್ಭದಲ್ಲಿ ನಮ್ಮ ಗ್ರಾಮಕ್ಕೆ ರಸ್ತೆ ಮತ್ತು ವಿದ್ಯುತ್ ಸಂಪರ್ಕ ಕಲ್ಪಿಸಲಾಗಿತ್ತು. ಅದನ್ನು ಹೊರತುಪಡಿಸಿದರೆ ಈವರೆಗೆ ಯಾವುದೇ ಸಮರ್ಪಕ ಮೂಲಸೌಕರ್ಯ ಸಿಕ್ಕಿಲ್ಲ. ಶೇಷೇಗೌಡ ಅವರ ಹತ್ಯೆಯಾದ ಸಂದರ್ಭದಲ್ಲಿ ಅವರ ಊರಿಗೆ ರಸ್ತೆ ಹಾಗೂ ಸೇತುವೆ ಸಂಪರ್ಕ ಕಲ್ಪಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಅದರ ಭಾಗವಾಗಿ ₹50 ಲಕ್ಷ ವೆಚ್ಚದಲ್ಲಿ ಹೋರಿಕೊಂಡ ಸೇತುವೆ ಮಂಜೂರಾಗಿದೆ. ಆದರೆ, ಕಾಮಗಾರಿ ಆರಂಭಿಸಿ ತಿಂಗಳುಗಳೇ ಕಳೆದರೂ ಪೂರ್ಣಗೊಳಿಸದೆ ವಿಳಂಬ ಮಾಡುತ್ತಿರುವುದರಿಂದ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮಸ್ಥರ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕೆ ಜೆಸಿಬಿ ವಾಹನ ತರಿಸಿದ ಎಂಜಿನಿಯರ್ ಹಾಗೂ ಗುತ್ತಿಗೆದಾರರು ಅಂದೇ ಕಾಮಗಾರಿ ಆರಂಭಿಸುವುದಾಗಿ ಭರವಸೆ ನೀಡಿದರು. ಇದಾದ ಬಳಿಕ ಗ್ರಾಮಸ್ಥರು ರಸ್ತೆ ತಡೆ ಪ್ರತಿಭಟನೆಯನ್ನು ಹಿಂಪಡೆದರು. ಸ್ಥಳೀಯರು ನ್ಯೂಸ್ ಮಲ್ನಾಡ್ ಗೆ ಧನ್ಯವಾದ ತಿಳಿಸಿದರು

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.