ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಗರದ ಗೌರಿಕಾಲುವೆ ಬಡಾವಣೆ ಬಳಿ ಖಾಸಗಿ ಶಾಲಾ ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟರ್ ಚಲಾಯಿಸುತ್ತಿದ್ದ ಅಪ್ರಾಪ್ತ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ವೇಗವಾಗಿ ಬರುತ್ತಿದ್ದ ಖಾಸಗಿ ಶಾಲಾ ಬಸ್ಗೆ ಸ್ಕೂಟರ್ ಅಡ್ಡ ಬಂದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಬಸ್ಸಿನಡಿ ಸಿಲುಕಿದ್ದಾನೆ. ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ದೃಶ್ಯಗಳು ಸ್ಥಳದಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಶಾಲಾ ಬಸ್ ಚಾಲಕ ಅತಿ ವೇಗವಾಗಿ ವಾಹನ ಚಲಾಯಿಸುತ್ತಿದ್ದ ಆರೋಪವೂ ಕೇಳಿಬಂದಿದೆ.
ಅಪ್ರಾಪ್ತ ವಯಸ್ಕರಿಗೆ ವಾಹನ ಚಲಾಯಿಸಲು ಅವಕಾಶ ನೀಡಿದ ಪೋಷಕರ ವಿರುದ್ಧವೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ವಾಹನ ನೀಡುವ ಮುನ್ನ ಪೋಷಕರು ಎಚ್ಚರಿಕೆ ವಹಿಸಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
ಈ ಘಟನೆ ಚಿಕ್ಕಮಗಳೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.












