
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ನಡೆಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಮೂವರು ಆರೋಪಿಗಳನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಆರು ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ₹21 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

2026ರ ನವೆಂಬರ್ 6ರಂದು ರಾತ್ರಿ 9.20ರ ಸುಮಾರಿಗೆ ಅಗ್ರಹಾರ ಸರ್ಕಲ್ ಬಳಿ ಊಟ ಮುಗಿಸಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ 45 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಹಾಗೂ 15 ಗ್ರಾಂ ತೂಕದ ಚಿನ್ನದ ಸರವನ್ನು ಪಲ್ಸರ್ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಎಳೆದುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಾಯ್ಮಾ, ಐಪಿಎಸ್ ಅವರ ನಿರ್ದೇಶನದಂತೆ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿತ್ತು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್ ಸಿ.ಟಿ., ಉಪ ಪೊಲೀಸ್ ಅಧೀಕ್ಷಕರಾದ ನಾಗರಾಜ್ ಕೆ.ಆರ್. ಹಾಗೂ ಪ್ರಭಾರ ಡಿವೈಎಸ್ಪಿ ತಿಪ್ಪೇಸ್ವಾಮಿ ಅವರ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಭಯ್ ಪ್ರಕಾಶ್ ಸೋಮನಾಳ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಪೊಲೀಸ್ ತಂಡವು ಸುಮಾರು ನಾಲ್ಕು ತಿಂಗಳ ಕಾಲ ಚಿಕ್ಕಮಗಳೂರು ನಗರ ಹಾಗೂ ಹೊರವಲಯಗಳಲ್ಲಿ 800ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದೆ. ಅನುಮಾನಾಸ್ಪದ ವ್ಯಕ್ತಿಗಳ ಭಾವಚಿತ್ರಗಳನ್ನು ಸಂಗ್ರಹಿಸಿ, ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ಮೂವರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಬಂಧಿತರಿಂದ ಸುಮಾರು ₹16 ಲಕ್ಷ ಮೌಲ್ಯದ 116 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ಅಂದಾಜು ₹4 ಲಕ್ಷ ಮೌಲ್ಯದ ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಹಾಗೂ ₹1 ಲಕ್ಷ ಮೌಲ್ಯದ ಪಲ್ಸರ್ ಬೈಕ್ ಸೇರಿದಂತೆ ಒಟ್ಟು ₹21 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯಿಂದ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ನಾಲ್ಕು ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯ ಎರಡು ಪ್ರಕರಣಗಳು ಸೇರಿದಂತೆ ಒಟ್ಟು ಆರು ಸರಗಳ್ಳತನ ಪ್ರಕರಣಗಳನ್ನು ಭೇದಿಸಲಾಗಿದೆ.
ಕಾರ್ಯಾಚರಣೆಯಲ್ಲಿ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಗಳ ಅಧಿಕಾರಿಗಳು, ಸಿಬ್ಬಂದಿ ಮತ್ತು ತಾಂತ್ರಿಕ ವಿಭಾಗದ ಸಿಬ್ಬಂದಿ ಪಾಲ್ಗೊಂಡಿದ್ದರು.












