ಟಿಎಪಿಸಿಎಂಎಸ್ ಚುನಾವಣೆ: ಕಾರ್ಯಕರ್ತರಿಗೆ ಅನ್ಯಾಯದ ಆರೋಪ, ನಾಮಪತ್ರ ಹಿಂಪಡೆದ ರಾಮಸ್ವಾಮಿ ಶೆಟ್ಟಿಗದ್ದೆ

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಟಿಎಪಿಸಿಎಂಎಸ್ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ರಾಮಸ್ವಾಮಿ ಶೆಟ್ಟಿಗದ್ದೆ ಅವರು ‘ಎ’ ವರ್ಗದಿಂದ ಸಲ್ಲಿಸಿದ್ದ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ.

ಚುನಾವಣೆಗೆ ಸಂಬಂಧಿಸಿದಂತೆ ಕೊಪ್ಪದಲ್ಲಿ ನಡೆದ ಮೊದಲ ಸಭೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಬಳಿಕ ಚಿಕ್ಕಮಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಅವರ ಸಮ್ಮುಖದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿತ್ತು. ಈ ವೇಳೆ ಹೊಸಬರಿಗೆ ಅವಕಾಶ ನೀಡುವಂತೆ ತಾನು ಮನವಿ ಮಾಡಿದ್ದೆ. ನಂತರ ಬಿ ವರ್ಗದ ಬಿಸಿಎಂ-ಬಿ ಅಭ್ಯರ್ಥಿ ರವಿಕಾಂತ್ ಅವರ ಬದಲಿಗೆ ಸಚಿನ್ ನಂದಿಗೋಡ್ ಅವರ ಹೆಸರನ್ನು ಸೇರಿಸುವ ಪ್ರಸ್ತಾಪ ಬಂದಾಗ, ಪಕ್ಷದ ಹಿರಿಯ ಕಾರ್ಯಕರ್ತರಾದ ಅಜಿತ್ ಬಿಕ್ಕಳಿ ಅಥವಾ ಜಯಂತ್ ಅವರಿಗೆ ಅವಕಾಶ ನೀಡುವಂತೆ ಒತ್ತಾಯಿಸಿದ್ದೆ. ಆದರೆ ಅಂತಿಮಗೊಳಿಸಿದ ಪಟ್ಟಿಯಲ್ಲಿ ಬದಲಾವಣೆ ಬೇಡ ಎಂದು ಜಿಲ್ಲಾಧ್ಯಕ್ಷರು ತಿಳಿಸಿದ್ದರು ಎಂದು ರಾಮಸ್ವಾಮಿ ಹೇಳಿದ್ದಾರೆ.

ನಾಮಪತ್ರ ಸಲ್ಲಿಕೆಯ ನಂತರ ಸೂಚಕರ ಅರ್ಹತೆ ವಿಚಾರವಾಗಿ ನಟರಾಜ್ ಅವರ ನಾಮಪತ್ರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ ಬೆಳವಣಿಗೆಯೂ ನಡೆದಿದೆ. ಬಳಿಕ ಸಚಿನ್ ನಂದಿಗೋಡ್ ಅವರು ನಾಮಪತ್ರ ಸಲ್ಲಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ.

ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿದ ಹಿರಿಯ ಕಾರ್ಯಕರ್ತರನ್ನು ಕಡೆಗಣಿಸಿ ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವವರಿಂದಲೇ ಕಾರ್ಯಕರ್ತರಿಗೆ ಅನ್ಯಾಯವಾದರೆ ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿ ಏನು? ಇದರ ಹಿಂದೆ ದೊಡ್ಡವರ ಕೈವಾಡವೂ ಇದೆ ಎಂಬ ಅನುಮಾನವಿದೆ ಎಂದು ಅವರು ಆರೋಪಿಸಿದ್ದಾರೆ.

ನಾನು ನಾಮಪತ್ರ ಹಿಂಪಡೆದಿದ್ದರೂ ಸಹಕಾರ ಭಾರತಿಯ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತೇನೆ. ಕಾರ್ಯಕರ್ತರಲ್ಲಿ ಗೊಂದಲ ಮೂಡಬಾರದು ಎಂಬ ಉದ್ದೇಶದಿಂದ ಈ ಸ್ಪಷ್ಟನೆ ನೀಡುತ್ತಿದ್ದೇನೆ ಎಂದು ರಾಮಸ್ವಾಮಿ ಶೆಟ್ಟಿಗದ್ದೆ ತಿಳಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.