ಕಳಸ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಕಳಸ: (ನ್ಯೂಸ್ ಮಲ್ನಾಡ್ ವರದಿ) ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಅಪರಾಧಿಗೆ ಚಿಕ್ಕಮಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಪೋಕ್ಸೊ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿದೆ.

ಕಳಸ ತಾಲ್ಲೂಕಿನ ಎಸ್ಟೇಟ್‌ವೊಂದರ ಲೈನ್ ಮನೆಯಲ್ಲಿ ವಾಸವಾಗಿದ್ದ ಅನಿಲ್ ಪೂಜಾರಿ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಆತ ಕೂಲಿ ಕೆಲಸಕ್ಕೆ ಬರುತ್ತಿದ್ದ ಕುಟುಂಬದ ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿದ್ದನು. ಬಾಲಕಿ ಗರ್ಭಿಣಿಯಾದ ಬಳಿಕ ಮದುವೆಯಾಗುವುದಾಗಿ ಭರವಸೆ ನೀಡಿದ್ದ ಎಂದು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಕೊಪ್ಪ ವಿಭಾಗದ ಡಿವೈಎಸ್‌ಪಿ ಬಾಲಾಜಿ ಸಿಂಗ್ ಅವರ ನೇತೃತ್ವದಲ್ಲಿ ಪಿಎಸ್‌ಐ ಚಂದ್ರಶೇಖರ್ ಹಾಗೂ ಸಿಬ್ಬಂದಿ ಸಾದಿಕ್ ಬಾಷಾ, ಎ.ಬಿ. ಪರಮೇಶ, ಶಿವಕುಮಾರ್ ಮತ್ತು ವಿಶ್ವನಾಥ್ ಪಾಳೇಗಾರ ಒಳಗೊಂಡ ತಂಡ ನಡೆಸಿತ್ತು. ತನಿಖೆ ಪೂರ್ಣಗೊಳಿಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಹಾಗೂ ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಘವೇಂದ್ರ ಗುರುಪ್ರಸಾದ್ ಕುಲಕರ್ಣಿ ಅವರು ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹25 ಸಾವಿರ ದಂಡ ವಿಧಿಸಿದರು. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳ ಸಾಮಾನ್ಯ ಕಾರಾಗೃಹ ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಿದ್ದಾರೆ.

ಅಲ್ಲದೆ, ಸಂತ್ರಸ್ತ ಬಾಲಕಿಗೆ ಕರ್ನಾಟಕ ರಾಜ್ಯ ಸಂತ್ರಸ್ತರ ಪರಿಹಾರ ನಿಧಿಯಿಂದ ₹4 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ. ಭರತಕುಮಾರ್ ವಾದ ಮಂಡಿಸಿದ್ದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.