ಕೊಪ್ಪ: ರಸ್ತೆ ಮಾಡದಿದ್ದರೆ ಮತ ಇಲ್ಲ! ಚುನಾವಣೆ ಬಹಿಷ್ಕಾರದ ಬ್ಯಾನರ್ ಹಾಕಿ ಮೇರುತಿ ಬಡಾವಣೆ ಗ್ರಾಮಸ್ಥರ ಆಕ್ರೋಶ

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ)  ರಸ್ತೆ ಅಭಿವೃದ್ಧಿಗೆ ವರ್ಷಗಳಿಂದ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಇದೀಗ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ. ಕೊಪ್ಪ ತಾಲೂಕಿನ ಮೇಗುಂದ ಹೋಬಳಿಯ ಅತ್ತಿಕೊಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸರೀಕಟ್ಟೆ ಸಮೀಪದ ಮೇರುತಿ ಬಡಾವಣೆಯಲ್ಲಿ ಚುನಾವಣೆ ಬಹಿಷ್ಕಾರದ ಬ್ಯಾನರ್ ಅಳವಡಿಸುವ ಮೂಲಕ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಅಸಮಾಧಾನ ಹೊರಹಾಕಿದ್ದಾರೆ.

“ರಸ್ತೆ ಮಾಡಿದ್ರೆ ಮಾತ್ರ ಮತ, ಇಲ್ಲದಿದ್ದರೆ ನಮ್ಮೂರಿಗೆ ಯಾವ ರಾಜಕೀಯ ಪಕ್ಷಕ್ಕೂ ಪ್ರವೇಶವಿಲ್ಲ. ರಸ್ತೆ ಮಾಡಿದವರಿಗೆ ನಮ್ಮ ಮತ” ಎಂಬ ಸಂದೇಶವಿರುವ ಬ್ಯಾನರ್ ಅಳವಡಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಹತ್ತಾರು ವರ್ಷಗಳಿಂದ ರಸ್ತೆ ಸಮಸ್ಯೆ!:
ಮೇರುತಿ ಬಡಾವಣೆಯಲ್ಲಿ ಸುಮಾರು 60ಕ್ಕೂ ಹೆಚ್ಚು ಮನೆಗಳಿದ್ದು, ಇಲ್ಲಿನ ಜನರಿಗೆ ಸುಸಜ್ಜಿತ ರಸ್ತೆ ಇಲ್ಲದೆ ನಿತ್ಯ ಪರದಾಡುವ ಪರಿಸ್ಥಿತಿ ಎದುರಾಗಿದೆ. ಮೇರುತಿ ಪರ್ವತದ ತಪ್ಪಲಿನಲ್ಲಿರುವ ಈ ಪ್ರದೇಶದಲ್ಲಿ ಮಳೆಗಾಲದಲ್ಲಿ ರಸ್ತೆಯ ಮೇಲೆ ನೀರು ಹರಿದು ಗುಂಡಿಗಳು ನಿರ್ಮಾಣವಾಗುತ್ತವೆ. ಇದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ಸಂಚರಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ರಸ್ತೆಯ ಚರಂಡಿ ವ್ಯವಸ್ಥೆ ಹದಗೆಟ್ಟಾಗ ಗ್ರಾಮಸ್ಥರೇ ಸ್ವಂತ ಖರ್ಚಿನಲ್ಲಿ ದುರಸ್ತಿ ಮಾಡಿಕೊಳ್ಳುವ ಅನಿವಾರ್ಯತೆ ಎದುರಾಗಿದೆ. ಆದರೆ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಸಮಸ್ಯೆ ಪರಿಹಾರಕ್ಕೆ ಮುಂದಾಗುತ್ತಿಲ್ಲ ಎಂಬುದು ಗ್ರಾಮಸ್ಥರ ಆರೋಪ.

ಮನವಿ ಮಾಡಿದರೂ ಸಿಗುತ್ತಿರುವುದು ಭರವಸೆ ಮಾತ್ರ!:
ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಹೊಂಡಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ಸಂಚರಿಸುವುದೇ ದೊಡ್ಡ ಸವಾಲಾಗಿದೆ. ಹಲವು ಬಾರಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ರಸ್ತೆ ಅಭಿವೃದ್ಧಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಪ್ರತಿ ಬಾರಿಯೂ ಭರವಸೆ ನೀಡಲಾಗುತ್ತಿದೆಯೇ ಹೊರತು ಕಾಮಗಾರಿ ಮಾತ್ರ ಆರಂಭವಾಗುತ್ತಿಲ್ಲ. ಹೀಗಾಗಿ ಅನಿವಾರ್ಯವಾಗಿ ಗ್ರಾಮಸ್ಥರೆಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಬಹಿಷ್ಕಾರದ ನಿರ್ಧಾರ ಕೈಗೊಂಡಿದ್ದೇವೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅತ್ತಿಕೊಡಿಗೆ ಪಂಚಾಯಿತಿ ವ್ಯಾಪ್ತಿಯಲ್ಲೂ ರಸ್ತೆ ಅವ್ಯವಸ್ಥೆ!:
ಕೇವಲ ಮೇರುತಿ ಬಡಾವಣೆ ಮಾತ್ರವಲ್ಲದೆ ಅತ್ತಿಕೊಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆತ್ತದಕೊಳಲು, ಬೆಂಡೆಹಕ್ಲು, ಕವನಳ್ಳ, ಹೊನ್ನಗುಂಡಿ, ನೆಫಾ, ಅಣಕಲುಮಕ್ಕಿ, ಕಲ್ಲುಗುಡ್ಡೆ ಹಾಗೂ ದೊಡ್ಡಬಿಳಾಲು ಭಾಗಗಳ ರಸ್ತೆಗಳೂ ಹದಗೆಟ್ಟಿವೆ ಎನ್ನಲಾಗಿದೆ. ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಗೆ ತಲುಪಿರುವ ರಸ್ತೆಗಳಲ್ಲಿ ಗ್ರಾಮಸ್ಥರೇ ಮಣ್ಣು ಹಾಕಿ ಗುಂಡಿಗಳನ್ನು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಬೇಕಾದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸುತ್ತಾರಾ? ಅಥವಾ ಗ್ರಾಮಸ್ಥರ ಚುನಾವಣೆ ಬಹಿಷ್ಕಾರದ ಎಚ್ಚರಿಕೆಗೆ ಮಣಿಯುತ್ತಾರಾ ಎಂಬುದನ್ನು ಕಾದುನೋಡಬೇಕಿದೆ. (ವರದಿ: ಶಶಿ ಬೆತ್ತದಕೊಳಲು)

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.