ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಖಾತೆ ಬದಲಾವಣೆ ಮಾಡಿಕೊಡಲು ರೈತನೊಬ್ಬನಿಂದ ಲಂಚ ಸ್ವೀಕರಿಸುತ್ತಿದ್ದ ಕಂದಾಯ ಇಲಾಖೆಯ ಅಧಿಕಾರಿ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿ ನಾಡಕಚೇರಿಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಕಂದಾಯ ನಿರೀಕ್ಷಕ (ರೆವೆನ್ಯೂ ಇನ್ಸ್ಪೆಕ್ಟರ್) ರಮೇಶ್ ಲೋಕಾಯುಕ್ತ ದಾಳಿಗೆ ಸಿಕ್ಕಿಬಿದ್ದ ಅಧಿಕಾರಿ.

ರೈತರೊಬ್ಬರು ತಮ್ಮ ಜಮೀನಿನ ಖಾತೆ ಬದಲಾವಣೆಗಾಗಿ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ಕಂದಾಯ ನಿರೀಕ್ಷಕ ರಮೇಶ್ ಅವರು 30 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಲಂಚ ನೀಡಲು ಇಚ್ಛಿಸದ ರೈತರು ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ದೂರಿನ ಆಧಾರದ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ಲಿಂಗದಹಳ್ಳಿ ನಾಡಕಚೇರಿಯ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ರೈತನಿಂದ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ರಮೇಶ್ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ.
ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ದಾಳಿಯ ವೇಳೆ ಆರೋಪಿಯಿಂದ ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗಿದೆ. ಈ ಕುರಿತು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












