ಕೊಪ್ಪ: 25 ವರ್ಷವಾದರೂ ದುರಸ್ತಿಯಾಗದ ರಸ್ತೆ: ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಮೇಗುಂದ ಹೋಬಳಿಯ ಅತ್ತಿಕೊಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನಗುಂಡಿ ಗ್ರಾಮದ ನೇಫಾ ಗ್ರಾಮದಲ್ಲಿ ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರು ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

‘ರಸ್ತೆ ದುರಸ್ತಿ ಮಾಡಿದರೆ ಮಾತ್ರ ಮತ, ಇಲ್ಲದಿದ್ದರೆ ನಮ್ಮೂರಿಗೆ ಯಾವುದೇ ರಾಜಕೀಯ ಪಕ್ಷದ ಪ್ರವೇಶವಿಲ್ಲ’ ಎಂಬ ಎಚ್ಚರಿಕೆಯ ಬ್ಯಾನರ್ ಪ್ರದರ್ಶಿಸುವ ಮೂಲಕ ಗ್ರಾಮಸ್ಥರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಪ್ಪ ತಾಲೂಕಿನ ಗಡಿ ಗ್ರಾಮವಾಗಿರುವ ನೇಫಾಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಳೆದ ಸುಮಾರು 25 ವರ್ಷಗಳಿಂದ ದುರಸ್ತಿ ಕಂಡಿಲ್ಲ. ಸಂಪೂರ್ಣ ರಸ್ತೆ ಹೊಂಡಗುಂಡಿಗಳಿಂದ ಕೂಡಿದ್ದು, ವಾಹನ ಸವಾರರು ಪ್ರತಿನಿತ್ಯ ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಗ್ರಾಮಸ್ಥರು ಹಲವು ವರ್ಷಗಳಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ಅಭಿವೃದ್ಧಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ ಚುನಾವಣೆ ಬಹಿಷ್ಕಾರದಿಂದ ಹಿಂದೆ ಸರಿದರೂ ಭರವಸೆ ಈಡೇರಿಲ್ಲ:
ಈ ಹಿಂದೆಯೂ ಗ್ರಾಮಸ್ಥರು ವಿಧಾನಸಭೆ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು, ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ ರಸ್ತೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದರು. ಅಧಿಕಾರಿಗಳ ಮಾತನ್ನು ನಂಬಿ ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ನಿರ್ಧಾರದಿಂದ ಹಿಂದೆ ಸರಿದಿದ್ದರು.

ಆದರೆ ಚುನಾವಣೆ ಮುಗಿದು ವರ್ಷಗಳು ಕಳೆದರೂ ರಸ್ತೆ ಮಾತ್ರ ಅಭಿವೃದ್ಧಿಯಾಗಿಲ್ಲ. ಅಂದು ಭರವಸೆ ನೀಡಿದ್ದ ಅಧಿಕಾರಿಗಳು ಇದೀಗ ವರ್ಗಾವಣೆಗೊಂಡಿದ್ದು, ಗ್ರಾಮಸ್ಥರ ಸಮಸ್ಯೆ ಹಾಗೆಯೇ ಉಳಿದಿದೆ.

ಈ ಬಾರಿ ಯಾವುದೇ ಭರವಸೆಗಳಿಗೆ ಮಣಿಯುವುದಿಲ್ಲ. ನಮ್ಮೂರಿನ ರಸ್ತೆ ಅಭಿವೃದ್ಧಿಯಾಗುವುದೇ ನಮಗೆ ಮುಖ್ಯ. ರಸ್ತೆ ದುರಸ್ತಿ ಕಾರ್ಯ ಆರಂಭವಾಗುವವರೆಗೂ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ. ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. (ವರದಿ: ಶಶಿ ಬೆತ್ತದಕೊಳಲು)

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.