ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಬಿದಿರುತಳ ಬಸ್ ನಿಲ್ದಾಣದ ಬಳಿ ಭೂಮಿಯ ತೇವಾಂಶ ಹೆಚ್ಚಾದ ಪರಿಣಾಮ ಬಂಡೆಯೊಂದು ಕುಸಿದ ಘಟನೆ ನಡೆದಿದೆ.
ಮಲೆನಾಡಿನಲ್ಲಿ ಭಾರೀ ಮಳೆಯಾಗದಿದ್ದರೂ ಕಳೆದ ಒಂದು ತಿಂಗಳಿಂದ ನಿರಂತರವಾಗಿ ಸಾಧಾರಣ ಮಳೆಯಾಗುತ್ತಿದ್ದು, ಇದರ ಪರಿಣಾಮವಾಗಿ ಘಾಟಿ ಪ್ರದೇಶದಲ್ಲಿ ಭೂಮಿಯ ತೇವಾಂಶ ಹೆಚ್ಚಾಗಿದೆ. ಇದೇ ಕಾರಣದಿಂದ ಬಂಡೆ ಕುಸಿದಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಬಂಡೆ ಕುಸಿತ ಸಂಭವಿಸಿದರೂ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ವಾಹನ ಸಂಚಾರಕ್ಕೂ ಯಾವುದೇ ತೊಂದರೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಲೆನಾಡಿನ ವಿವಿಧ ಭಾಗಗಳಲ್ಲಿ ಆಗಾಗ ಸಾಧಾರಣ ಮಳೆಯಾಗುತ್ತಿದ್ದು, ಘಾಟಿ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. (ವರದಿ- ತನು ಕೊಟ್ಟಿಗೆಹಾರ)












