ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನವದೆಹಲಿಯ ಜಂತರ್ ಮಂತರ್ನಲ್ಲಿ ಪರಿಸರ ಹೋರಾಟಗಾರ ಹಾಗೂ ಲಡಾಖ್ನ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚೂಕ್ ಅವರನ್ನು ಬಂಧಿಸಿರುವುದು ಹಾಗೂ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮತ್ತು ನಾಗರಿಕರ ಮೇಲೆ ಲಾಠಿ ಚಾರ್ಜ್ ನಡೆಸಿರುವುದನ್ನು ಸಾಮಾಜಿಕ ಕಾರ್ಯಕರ್ತ ಸಂದೀಪ್ ಜೆವಿ ಜಲದುರ್ಗ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಶಾಂತಿಯುತವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಾಗೂ ಪ್ರತಿಭಟನೆ ನಡೆಸುವ ಹಕ್ಕನ್ನು ನೀಡಿದೆ. ಇಂತಹ ಸಂದರ್ಭದಲ್ಲಿ ಪ್ರತಿಭಟನಾಕಾರರ ಧ್ವನಿಯನ್ನು ಬಲಪ್ರಯೋಗದ ಮೂಲಕ ಹತ್ತಿಕ್ಕಲು ಮುಂದಾಗಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ದೇಶದ ಭವಿಷ್ಯವಾಗಿದ್ದು, ಅವರು ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದರೆ, ಅವರೊಂದಿಗೆ ಸಂವಾದ ನಡೆಸುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ. ಲಾಠಿ ಚಾರ್ಜ್ನಂತಹ ಕ್ರಮಗಳು ಯಾವುದೇ ರೀತಿಯಲ್ಲೂ ಸಮರ್ಥನೀಯವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರವು ಭಿನ್ನಾಭಿಪ್ರಾಯಗಳನ್ನು ಪ್ರಜಾಪ್ರಭುತ್ವದ ಮನೋಭಾವದಿಂದ ಸ್ವೀಕರಿಸಿ, ಪ್ರತಿಭಟನಾಕಾರರೊಂದಿಗೆ ಸಂವಾದ ನಡೆಸುವ ಮೂಲಕ ಸಮಸ್ಯೆಗಳಿಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಬೇಕು. ಬಂಧನಕ್ಕೊಳಗಾದವರ ಹಕ್ಕುಗಳನ್ನು ಗೌರವಿಸಿ, ಕಾನೂನು ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಅನುಸರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
“ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯವು ದೇಶದ ವಿರುದ್ಧವಲ್ಲ; ಅದು ಉತ್ತಮ ಆಡಳಿತಕ್ಕೆ ದಾರಿದೀಪ” ಎಂದು ಹೇಳಿರುವ ಸಂದೀಪ್ ಜೆವಿ ಜಲದುರ್ಗ, ಈ ಘಟನೆಯ ಕುರಿತು ಸಮಗ್ರ ಪರಿಶೀಲನೆ ನಡೆಸಿ, ನಾಗರಿಕರ ಮೂಲಭೂತ ಹಕ್ಕುಗಳನ್ನು ಗೌರವಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. (ವರದಿ- ಶಶಿ ಬೆತ್ತದಕೊಳಲು)












