ಭದ್ರಾವತಿ: (ನ್ಯೂಸ್ ಮಲ್ನಾಡ್ ವರದಿ) ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಾಲ್ಲೂಕಿನ 20 ವರ್ಷದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹31 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಆರೋಪಿ ಬಾಲಕಿಯೊಂದಿಗೆ ಪರಿಚಯ ಬೆಳೆಸಿಕೊಂಡು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ 2024ರಲ್ಲಿ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯದಲ್ಲಿ ಆರೋಪದ ವಿರುದ್ಧ ಸಲ್ಲಿಕೆಯಾಗಿದ್ದ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಬಳಿಕ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ, ಆರೋಪಿಗೆ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹31 ಸಾವಿರ ದಂಡ ವಿಧಿಸಿ ಆದೇಶಿಸಿದೆ.














