ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋರೇಬೈಲಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಪದ್ಮಾವತಿ ಅವರಿಗೆ ಸೇರಿದ ವಾಸದ ಮನೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಸಂಪೂರ್ಣ ಮನೆ ಆವರಿಸಿದೆ. ಪರಿಣಾಮ ಮನೆಯಲ್ಲಿದ್ದ ₹15 ಸಾವಿರ ನಗದು, ಚಿನ್ನಾಭರಣ, ಅಂದಾಜು 50 ಕೆ.ಜಿ ತೂಕದ ಮೂರು ಚೀಲ ಅಡಿಕೆ, 10 ಕ್ವಿಂಟಲ್ ಭತ್ತ, ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಹಾಗೂ ಅಗತ್ಯ ದಾಖಲೆ ಪತ್ರಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಘಟನೆ ಸಂಭವಿಸಿದ ವೇಳೆ ಪದ್ಮಾವತಿ ಅವರು ಪಕ್ಕದ ಮನೆಯಲ್ಲಿದ್ದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಾಯದೊಂದಿಗೆ ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ಮನೆಯಲ್ಲಿದ್ದ ವಸ್ತುಗಳನ್ನು ಉಳಿಸಲು ಸಾಧ್ಯವಾಗಲಿಲ್ಲ. ಮಂಗಳವಾರ ಗ್ರಾಮ ಲೆಕ್ಕಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














