ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ರೋಟರಿ ಕ್ಲಬ್ ಹಾಗೂ ತಾಲ್ಲೂಕು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಶೃಂಗೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶೃಂಗೇರಿ ಸಿವಿಲ್ ನ್ಯಾಯಾಧೀಶ ಜೀತು ಆರ್.ಎಸ್. ಚಾಲನೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶವನ್ನು ಸಂಪೂರ್ಣ ಪೋಲಿಯೋ ಮುಕ್ತವಾಗಿಸುವ ರಾಷ್ಟ್ರೀಯ ಅಭಿಯಾನದಲ್ಲಿ ಪ್ರತಿಯೊಬ್ಬರ ಸಹಭಾಗಿತ್ವ ಅತ್ಯಗತ್ಯವಾಗಿದೆ. ಐದು ವರ್ಷದೊಳಗಿನ ಪ್ರತಿಯೊಬ್ಬ ಮಗುವಿಗೂ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಪೋಲಿಯೋ ಮುಕ್ತ ಭಾರತದ ಯಶಸ್ಸಿಗೆ ಪೋಷಕರು ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು ಕರೆ ನೀಡಿದರು.
ಬಳಿಕ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಔಷಧಿ ಹಾಕುವ ಮೂಲಕ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು, ರೋಟರಿ ಕ್ಲಬ್ ಪದಾಧಿಕಾರಿಗಳು, ವೈದ್ಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ, ಪೋಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.















