ಶೃಂಗೇರಿ, ಆಗಸ್ಟ್ 2: (ನ್ಯೂಸ್ ಮಲ್ನಾಡ್ ವರದಿ) ಪುಷ್ಯ ಮಳೆಯ ಅಬ್ಬರಕ್ಕೆ ಶೃಂಗೇರಿ ತಾಲೂಕು ತತ್ತರಗೊಂಡಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ತುಂಗಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪಟ್ಟಣದ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿವೆ.
ಕೆರೆಕಟ್ಟೆ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಪರಿಣಾಮ ತುಂಗಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ನದಿಯ ನೀರಿನ ಮಟ್ಟದಲ್ಲಿ ಭಾರೀ ಏರಿಕೆಯಾಗಿದೆ. ಇದರ ಪರಿಣಾಮವಾಗಿ ಶೃಂಗೇರಿ ಪಟ್ಟಣದ ಹಲವು ರಸ್ತೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಸಾರ್ವಜನಿಕ ಶೌಚಾಲಯ ಕುಸಿತ:
ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಕುರುಬಗೇರಿ ಪ್ರದೇಶದಲ್ಲಿರುವ ಸಾರ್ವಜನಿಕ ಶೌಚಾಲಯ ಕುಸಿತವಾಗಿದೆ.

ಗಾಂಧಿ ಮೈದಾನ ಸಂಪೂರ್ಣ ಜಲಾವೃತ:
ಇದೇ ವೇಳೆ, ಶೃಂಗೇರಿಯ ಗಾಂಧಿ ಮೈದಾನ ಸಂಪೂರ್ಣ ಜಲಾವೃತವಾಗಿದ್ದು, ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ನದಿ ತೀರದ ನಿವಾಸಿಗಳಿಗೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.













