ಶೃಂಗೇರಿ/ಹರಿಹರಪುರ: (ನ್ಯೂಸ್ ಮಲ್ನಾಡ್ ವರದಿ) ಹಿಟ್ ಅಂಡ್ ರನ್ ಗೆ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೋನಗೋಡು ಬಳಿ ನಡೆದಿದೆ. ಶೃಂಗೇರಿಯ ಕಲ್ಕಟ್ಟೆ ಮೂಲದ ರಫಿಕ್ (31) ಮೃತ ದುರ್ದೈವಿ.
ಇಂದು ಬೆಳಿಗ್ಗೆ ಸುಮಾರು 6 ಗಂಟೆ ಸುಮಾರಿಗೆ ರಫಿಕ್ ಅವರು ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ತೀವ್ರತೆಗೆ ರಫಿಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ರಫಿಕ್ ದುಬೈನಲ್ಲಿ ಉದ್ಯೋಗದಲ್ಲಿದ್ದು, ರಜೆಗೆಂದು ಕೆಲ ದಿನಗಳ ಹಿಂದೆ ಊರಿಗೆ ಬಂದಿದ್ದರು. ಇದೇ ವಾರದಲ್ಲಿ ಮರಳಿ ದುಬೈಗೆ ತೆರಳಲು ರಿಟರ್ನ್ ಟಿಕೆಟ್ ಕೂಡ ಬುಕ್ ಮಾಡಲಾಗಿತ್ತು. ಆದರೆ ಅದಕ್ಕೂ ಮುನ್ನವೇ ಈ ದುರ್ಘಟನೆ ಸಂಭವಿಸಿದೆ.
ಘಟನೆ ಸಂಬಂಧ ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ವಾಹನದ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.












