ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಸ್ತೆ ಕಾಮಗಾರಿ ವಿಚಾರವಾಗಿ ಆರಂಭವಾದ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವಿನ ವಾಗ್ವಾದ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ನಗರ ರಾಜಕೀಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ. ಉಭಯ ಪಕ್ಷಗಳ ಕಾರ್ಯಕರ್ತರು ಪರಸ್ಪರ ದೂರು-ಪ್ರತಿದೂರು ದಾಖಲಿಸುವ ಮೂಲಕ ಪ್ರಕರಣ ರಾಜಕೀಯ ಸಮರದ ಸ್ವರೂಪ ಪಡೆದುಕೊಂಡಿದೆ.
ನಗರ ಪೊಲೀಸ್ ಠಾಣೆಯಲ್ಲಿ ಇದುವರೆಗೆ ಒಟ್ಟು ಆರು ಪ್ರಕರಣಗಳು ದಾಖಲಾಗಿದ್ದು, ಕಾಂಗ್ರೆಸ್, ಎಸ್ಡಿಪಿಐ ಹಾಗೂ ಮುಸ್ಲಿಂ ಸಂಘಟನೆಗಳಿಂದ ನಾಲ್ಕು ದೂರುಗಳು ಸಲ್ಲಿಕೆಯಾಗಿವೆ. ಬಿಜೆಪಿಯಿಂದ ಒಂದು ದೂರು ದಾಖಲಾಗಿದ್ದು, ಪೊಲೀಸರು ಕೂಡ ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸದ್ಯಕ್ಕೆ ಪೊಲೀಸರ ಸುಮೋಟೊ ಪ್ರಕರಣ ಹಾಗೂ ಮುದಾಸಿರ್ ಪಾಷ ನೀಡಿದ ದೂರಿನ ಮೇರೆಗೆ ಮಾತ್ರ ಎಫ್ಐಆರ್ ದಾಖಲಾಗಿದೆ. ಧರ್ಮ ನಿಂದನೆ ಆರೋಪದ ಅಡಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ವಿರುದ್ಧ ಮುಸ್ಲಿಂ ಮುಖಂಡರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ.
ಇನ್ನೊಂದೆಡೆ, ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಕೆ.ಪಿ. ವೆಂಕಟೇಶ್ ಅವರು ಕಾಂಗ್ರೆಸ್ ನಗರಸಭಾ ಸದಸ್ಯ ಪರಮೇಶ್ ರಾಜ್ ಅರಸ್, ಮುನೀರ್ ಹಾಗೂ ಮುಖಂಡರಾದ ಕಲಂದರ್ ಮತ್ತು ಜಾವಿದ್ ವಿರುದ್ಧ ಜಾತಿ ನಿಂದನೆ ಆರೋಪ ಮಾಡಿ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷದಿಂದಲೂ ಪ್ರತಿದೂರು ದಾಖಲಾಗಿದ್ದು, ಕುರವಂಗಿ ರಾಜೇಶ್ ಎಂಬುವವರು ಬಿಜೆಪಿ ಕಾರ್ಯಕರ್ತರ ವಿರುದ್ಧ ಜಾತಿ ನಿಂದನೆ ಆರೋಪ ಮಾಡಿದ್ದಾರೆ.
ಗಲಾಟೆಗೆ ಕಾರಣವೇನು?
ಇತ್ತೀಚೆಗೆ ಚಿಕ್ಕಮಗಳೂರು ನಗರದ ರಾಂಪುರ ರಸ್ತೆಯಲ್ಲಿ ನಡೆಯುತ್ತಿದ್ದ ರಸ್ತೆ ಕಾಮಗಾರಿ ವೀಕ್ಷಣೆಗೆ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಭೇಟಿ ನೀಡಿದ್ದ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿತ್ತು. ಬಳಿಕ ಅದು ತೀವ್ರ ಗಲಾಟೆಗೆ ತಿರುಗಿದ್ದು, ಈಗ ಕಾನೂನು ಹೋರಾಟ ಹಾಗೂ ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ.












