ಚಿಕ್ಕಮಗಳೂರು ನಗರದ ನರಿಗುಡ್ಡನಹಳ್ಳಿ ಸರ್ಕಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 19 ವರ್ಷದ ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಅಪಘಾತದ ಸಂಪೂರ್ಣ ದೃಶ್ಯ ಸಮೀಪದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮೃತರನ್ನು ಚರಣ್ (19) ಎಂದು ಗುರುತಿಸಲಾಗಿದೆ. ಹೊಸದಾಗಿ ಖರೀದಿಸಿದ್ದ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ರಸ್ತೆಯ ತಿರುವಿನಲ್ಲಿ ಎದುರು ದಿಕ್ಕಿನಿಂದ ಬಂದ ಮತ್ತೊಂದು ಬೈಕ್‌ನೊಂದಿಗೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಚರಣ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಹೊಸ ಬುಲೆಟ್ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಪ್ರಾಥಮಿಕ ಮಾಹಿತಿಯಂತೆ, ಚರಣ್ ಅವರು ಹೆಲ್ಮೆಟ್ ಧರಿಸಿರಲಿಲ್ಲ. ಇದರಿಂದ ತಲೆಗೆ ಗಂಭೀರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.












